ಸಫೂರ ಝರ್ಗರ್‌ಗೆ ಷರತ್ತು ಬದ್ಧ ಜಾಮೀನು ನೀಡಿದ ದೆಹಲಿ ಹೈಕೋರ್ಟ್

0
594

ಸನ್ಮಾರ್ಗ ವಾರ್ತೆ

ನವದೆಹಲಿ,ಜೂ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿತರಾಗಿದ್ದ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿನಿ ಸಪೂರ ಝರ್ಗರ್ ಅವರಿಗೆ ದೆಹಲಿ ಹೈಕೋರ್ಟ್ ಮಾನವೀಯತೆ ಆಧಾರದ ಮೇಲೆ ಇಂದು ಜಾಮೀನು ನೀಡಿದೆ. ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿ ಭಯೋತ್ಪಾದಕ ವಿರೋಧಿ ಕಾಯ್ದೆ ಅಡಿಯಲ್ಲಿ ದೆಹಲಿ ಪೊಲೀಸರು ಎಪ್ರಿಲ್ 10 ರಂದು ಗರ್ಭಿಣಿ ಸಫೂರರನ್ನು ಬಂಧಿಸಿದ್ದರು‌.

ಸರಕಾರ, ಮಾನವೀಯತೆಯ ಆಧಾರದಲ್ಲಿ ಜಾಮೀನು ನೀಡಲು ನಮ್ಮ ಅಭ್ಯಂತರವಿಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

10,000 ರೂಪಾಯಿಯ ವೈಯಕ್ತಿಕ ಬಾಂಡ್ ಸಲ್ಲಿಸಬೇಕೆಂದು ಆಜ್ಞಾಪಿಸಿದ್ದು, ದೆಹಲಿಯಿಂದ ಹೊರ ಹೋಗುವ ಮುನ್ನ ಅನುಮತಿ ಪಡೆಯಬೇಕು. ಅಲ್ಲದೇ, ಹದಿನೈದು ದಿನಕ್ಕೊಮ್ಮೆ ತನಿಖಾಧಿಕಾರಿಯನ್ನು ಭೇಟಿಯಾಗಬೇಕೆಂಬ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಹಿಂದೆ ಮೂರು ಬಾರಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಸಫೂರ‌ರ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂಬ ಕೂಗು ಬಲವಾಗಿ ಕೇಳಿ ಬಂದಿತ್ತು‌.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.