ನ‌ವೆಂಬರ್ 12ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

0
486

ಸನ್ಮಾರ್ಗ ವಾರ್ತೆ

ಮಂಗಳೂರು, ಅ.20: ರಾಜ್ಯ ಚುನಾವಣಾ ಆಯೋಗವು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ದಿನಾಂಕವನ್ನು ಘೋಷಿಸಿದ್ದು, ನವೆಂಬರ್ 12ರಂದು ಪಾಲಿಕೆಯ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ಪಾಲಿಕೆ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯು ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 31 ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮರು ಮತದಾನವಿದ್ದಲ್ಲಿ ನ.13ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದ್ದು, ನ.14ರಂದು ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.

ರವಿವಾರದಿಂದಲೇ ಚುನಾವಣಾ ನೀತಿ ಸಂಹಿತೆಯು ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ. ಮಹಾನಗರ ಪಾಲಿಕೆ ವ್ಯಾಪ್ತಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯು ಮೂರು ಲಕ್ಷ ರೂ.ವರೆಗೆ ಗರಿಷ್ಠ ವೆಚ್ಚ ಮಾಡಬಹುದಾಗಿದೆ.