ಸನ್ಮಾರ್ಗ ವಾರ್ತೆ
ಮಂಗಳೂರು; ಮಾ. 9- ಆದಿತ್ಯವಾರ ದುಬಾಯಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ಕೋರೋನ ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಉಳ್ಳಾಲದ ವ್ಯಕ್ತಿ ಆಸ್ಪತ್ರೆಯಿಂದಲೇ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.
ದುಬೈಯಿಂದ ಆಗಮಿಸಿದ್ದ ಈ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು ಮತ್ತು ಜ್ವರದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವಿಶೇಷ ವಿಭಾಗದಲ್ಲಿ ದಾಖಲಿಸಲಾಗಿತ್ತು. ಆದರೆ ವ್ಯಕ್ತಿಯ ಕುಟುಂಬದವರು ಯುವಕನನ್ನು ಕಳುಹಿಸಿಕೊಡುವಂತೆ ರಾತ್ರಿಯೇ ಆಸ್ಪತ್ರೆ ಆಡಳಿತ ಮಂಡಳಿಯೊಂದಿಗೆ ಜಗಳ ಮಾಡಿದ್ದರು ಎನ್ನುವ ಮಾಹಿತಿ ಸಿಕ್ಕಿದ್ದು, ತಾವು ಖಾಸಗಿ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದರು ಎನ್ನಲಾಗಿದೆ.
ಇದೀಗ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಮಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ/ ಸಿಕಂದರ್ ಪಾಷಾ ಅವರ ಹೇಳಿಕೆಯ ಪ್ರಕಾರ, ಜ್ವರ ಇದ್ದ ಕಾರಣ ಆ ವ್ಯಕ್ತಿಯನ್ನು ನಿಗಾದಲ್ಲಿ ಇರಿಸಲಾಗಿತ್ತು. ಆತನ ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ. ಪತ್ತೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ ಎಂದಿದ್ದಾರೆ. ಪೊಲೀಸರ ನೆರವಿನಿಂದ ವ್ಯಕ್ತಿಯನ್ನು ವಶಕ್ಕೆ ಪಡೆದು ರಕ್ತ ಮತ್ತಿತರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗುವುದು ಎಂದೂ ಹೇಳಿದ್ದಾರೆ.












