ಶಿವಮೊಗ್ಗ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಸ್ಫೋಟ: 8 ಮಂದಿ ಕಾರ್ಮಿಕರು ಮೃತ್ಯುವಶ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

0
466

ಸನ್ಮಾರ್ಗ ವಾರ್ತೆ

ಶಿವಮೊಗ್ಗ: ನಿನ್ನೆ ರಾತ್ರಿ 10.25 ರ ಸುಮಾರಿಗೆ ಹುಣಸೋಡು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಫೋಟಗೊಂಡ ಪರಿಣಾಮ 8 ಕಾರ್ಮಿಕರು ಮೃತಪಟ್ಟ ಬೀಕರ ಘಟನೆ‌ನಡೆದಿದ್ದು, ಸ್ಫೋಟಕ ನಿಷ್ಕ್ರಿಯ ದಳ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದೆ.

ಹುಣಸೋಡಿನಲ್ಲಿ ರಾತ್ರಿ ಸಂಭವಿಸಿದ ಡೈನಾಮೇಟ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಉನ್ನತ ತನಿಖೆಗೆ ಆದೇಶಿಸಿದ್ದಾರೆ.

ಅಧಿಕಾರಿಗಳೊಂದಿಗೆ ನಿನ್ನೆ ರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಕಲ್ಲು ಗಣಿಗಾರಿಕೆ ಜಮೀನು ಮಾಲೀಕ ಅವಿನಾಶ್ ಕುಲಕರ್ಣಿ, ಗುತ್ತಿಗೆದಾರ ಸುಧಾಕರ್ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಎಂಬುವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಪ್ರಧಾನಿ ಸಂತಾಪ:

ಸ್ಫೋಟದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಈ ಬಗ್ಗೆ ಟ್ವಿಟ್ ಮಾಡಿರುವ ಪಿಎಂ ಆಫ್ ಇಂಡಿಯಾ, ಶಿವಮೊಗ್ಗದಲ್ಲಿ ನಡೆದ ಪ್ರಾಣ ಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಶೀಘ್ರವೇ ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.