ಸನ್ಮಾರ್ಗ ವಾರ್ತೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಿಂದ ಊರ್ವ ಮಾರುಕಟ್ಟೆಯವರೆಗೆ ಕೊರೋನಾ-19 ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರೆಡ್ ಕ್ರಾಸ್ ಸೊಸೈಟಿಯ ಕಾರ್ಯಾಧ್ಯಕ್ಷ ಡಾ.ಶಾಂತರಾಮ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕೊರೋನಾ ಸೋಂಕಿನ ಎರಡನೇ ಅಲೆ ಜಿಲ್ಲೆಯನ್ನು ಆವರಿಸುವ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಅಳವಡಿಸಿಕೊಳ್ಳಲು ಹಮ್ಮಿಕೊಂಡಿರುವ ಜನ ಜಾಗೃತಿ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ. ಈ ಬಗ್ಗೆ ಜನರಿಗೆ ಮೊದಲು ಮನವರಿಕೆಯಾಗಬೇಕು.
ರೆಡ್ ಕ್ರಾಸ್ ಕೋವಿಡ್ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಿದೆ.ಇದೀಗ ಎರಡನೇ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಮುನ್ನೆಚ್ಚರಿಕಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ಜಿಲ್ಲಾಡಳಿತದ ಜೊತೆ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಶಾಂತರಾಮಶೆಟ್ಟಿ ಹೇಳಿದರು.ಬಳಿಕ ಪತ್ರಿಕಾ ಭವನದ ಪರಿಸರ ಹಾಗೂ ಊರ್ವ ಮಾರುಕಟ್ಟೆ ಪ್ರದೇಶದಲ್ಲಿ ಕೊರೋನಾ ತಡೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮಾಸ್ಕ್ ಧಾರಣೆಯ ಬಗ್ಗೆ ಜನರಿಗೆ ಅರಿವು ಮೂಡಿಸಿ, ಮಾಸ್ಕ್ ಇಲ್ಲದವರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ಜಾಗೃತಿ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್,ಪದಾಧಿಕಾರಿಗಳಾದ ಭಾಸ್ಕರ ರೈ ಕಟ್ಟ,ಆತ್ಮಭೂಷಣ್ ಮೊದಲಾದವರು ಉಪಸ್ಥಿತರಿದ್ದರು.













