ಸನ್ಮಾರ್ಗ ವಾರ್ತೆ
ಉಪ್ಪಿನಂಗಡಿ: ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಬೆಂಕಿಯುಂಟಾದ ಪರಿಣಾಮವಾಗಿ ಕಂಟೈನರ್ ಲಾರಿಯ ಚಾಲಕ ಸಜೀವ ದಹನಗೊಂಡು, ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ತಕ್ಷಣವೇ ಖಾಲಿ ಮಾಡಿಸಿದ್ದರಿಂದ ಅಪಾರ ಸಾವು ನೋವು ಸಂಭವಿಸುವುದನ್ನು ತಪ್ಪಿಸಿದ್ದು, ಬಸ್ಸು ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.















