ಹೆಚ್ಚುತ್ತಿರುವ ಕೊರೋನಾ ಪ್ರಕರಣ: ಮಹಾರಾಷ್ಟ್ರದಲ್ಲಿ ಭಾನುವಾರದಿಂದ ರಾತ್ರಿ ಕರ್ಫ್ಯೂ

0
616

ಸನ್ಮಾರ್ಗ ವಾರ್ತೆ

ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರದಿಂದ ರಾತ್ರಿ ಕರ್ಫ್ಯೂ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಕಚೇರಿ ತಿಳಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಆರಂಭದಿಂದಲೂ ರಾಜ್ಯದಲ್ಲಿ ಸೋಂಕಿನಲ್ಲಿ ಅತಿದೊಡ್ಡ ಏರಿಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ಶಾಪಿಂಗ್ ಮಾಲ್‌ಗಳನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜನರು ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ನಿರ್ಬಂಧಗಳ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ. ಲಾಕ್‌ಡೌನ್‌ಗಳನ್ನು ಯಾವಾಗ ಆದೇಶಿಸಬೇಕು ಎಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಹೇಳಿರುವ ಅವರು, ಯಾವುದೇ ಹಠಾತ್ ರಾಜ್ಯವ್ಯಾಪಿ ಲಾಕ್‌ಡೌನ್ ಆಗುವುದಿಲ್ಲ ಮತ್ತು ಒಂದು ವೇಳೆ ಸಂಪೂರ್ಣ ಲಾಕ್ಡೌನ್ ಮಾಡುವುದಿದ್ದರೂ ಸಾರ್ವಜನಿಕರಿಗೆ ಮುಂಗಡ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

“ನಾನು ಲಾಕ್ಡೌನ್ ವಿಧಿಸಲು ಬಯಸುವುದಿಲ್ಲ. ಆದರೆ ಕರೋನ ವೈರಸ್ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳದಿಂದಾಗಿ ಆರೋಗ್ಯ ಸೌಲಭ್ಯಗಳು ಕಡಿಮೆಯಾಗುವ ಸಾಧ್ಯತೆಯಿದೆ” ಎಂದು ಠಾಕ್ರೆ ಅವರ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರವು ಶುಕ್ರವಾರ 36,902 ಕರೋನವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.