ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ನಿಧನ

0
760

ಸನ್ಮಾರ್ಗ ವಾರ್ತೆ

ಬೆಂಗಳೂರು: ಸಾಹಿತ್ಯ ಲೋಕದಲ್ಲಿ ‘ಚಂಪಾ’ ಎಂದೇ ಹೆಸರಾದ ಕವಿ, ನಾಟಕಕಾರ, ಬಂಡಾಯ ಹೋರಾಟಗಾರ ಪ್ರೊ.ಚಂದ್ರಶೇಖರ ಪಾಟೀಲ(82) ಇಂದು ಬೆಳಿಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ಅಥವಾ ಹಾವೇರಿ ಸಮೀಪದ ಡೊಂಬರಮತ್ತೂರಿನಲ್ಲಿ ನಡೆಸುವುದೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕೋವಿಡ್‌ ಪ್ರಕರಣಗಳ ಕಾರಣ ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ ಎಂಬುದಾಗಿ ವರದಿಯಾಗಿದೆ.

ಹಾವೇರಿ, ಧಾರವಾಡದಲ್ಲಿ ಶಿಕ್ಷಣ ಪೂರೈಸಿದ ಅವರು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ವಿ.ಕೃ.ಗೋಕಾಕರ ಮಾರ್ಗದರ್ಶನ ಸಿಕ್ಕಿತ್ತು. ವಿದ್ಯಾರ್ಥಿಯಾಗಿದ್ದಾಗಲೇ ಅವರ ಪ್ರಥಮ ಕವನ ಸಂಕಲನ ‘ಬಾನುಲಿ'(1960) ಪ್ರಕಟವಾಯಿತು. ನವ್ಯ ಮಾರ್ಗದಲ್ಲಿ ಕಾವ್ಯ ಕೃಷಿ ಆರಂಭಿಸಿದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ಸ್ನಾತಕೋತ್ತರ(1962) ಪದವೀಧರರು. ಅದೇ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ‘ಚಂಪಾ’ ಅವರು ಸ್ನೇಹಿತರಾದ ಗಿರಡ್ಡಿ ಗೋವಿಂದರಾಜು, ಸಿದ್ದಲಿಂಗ ಪಟ್ಟಣ ಶೆಟ್ಟಿ ಅವರ ಜೊತೆ ಸೇರಿ ‘ಸಂಕ್ರಮಣ'(1964) ಹೆಸರಿನಲ್ಲಿ ದ್ವೈಮಾಸಿಕ ಸಾಹಿತ್ಯ ಪತ್ರಿಕೆ ಆರಂಭಿಸಿದರು. 2018ರ ವರೆಗೂ ಈ ಪತ್ರಿಕೆ ಪ್ರಕಟವಾಗಿದೆ.

ಬ್ರಿಟಿಷ್‌ ಕೌನ್ಸಿಲ್‌ನ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡ್‌ನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಪಡೆದ ಎಂ.ಎ.(ಭಾಷಾಶಾಸ್ತ್ರ) ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮಾ ಪಡೆದಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾಗಿ, ಛೇರ್‌ಮನ್‌ ಆಗಿ ನಿವೃತ್ತರಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ತುರ್ತುಪರಿಸ್ಥಿತಿಯ ದಿನಗಳಲ್ಲಿ, ಅದನ್ನು ಪ್ರತಿಭಟಿಸಿ, ಜೆ.ಪಿ. ಚಳವಳಿ ಬೆಂಬಲಿಸಿ ಜೈಲುವಾಸ ಅನುಭವಿಸಿದ್ದರು