ಸನ್ಮಾರ್ಗ ವಾರ್ತೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ಆದಿತ್ಯರಾವ್ ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು ತೀರ್ಪು ನೀಡಿದ್ದು, 20 ವರ್ಷ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
2020 ರ ಜ.20ರಂದು ಬೆಳಗ್ಗೆ ರಿಕ್ಷಾವೊಂದರಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅದರಲ್ಲಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿಯಿರುವ ಆಸನದ ಮೇಲಿರಿಸಿ ಅಲ್ಲಿಂದ ಪರಾರಿಯಾಗಿದ್ದನು.
ಬಾಂಬ್ ಇರಿಸಿದ ಬಳಿಕ ಆರೋಪಿ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಜ.22 ರಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಬಳಿಕ ಜ.25 ರಂದು ಮಂಗಳೂರು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದಿದ್ದರು.
ವಿಮಾನ ನಿಲ್ದಾಣದಲ್ಲಿ ಆತ ಇರಿಸಿ ಹೋಗಿದ್ದ ಬ್ಯಾಗಿನಲ್ಲಿ ಕಂಡು ಬಂದ ಶಂಕಾಸ್ಪದ ವಸ್ತುಗಳು ಸ್ಫೋಟಕಗಳೇ ಆಗಿವೆ ಎನ್ನುವುದು ಎಫ್ ಎಸ್ಎಲ್ ಟೆಸ್ಟ್ನಿಂದ ಸಾಬೀತಾಗಿತ್ತು. ಆದಿತ್ಯ ರಾವ್ ವಿರುದ್ಧ 700 ಪುಟಗಳ ದೋಷಾರೋಪಣಾ ಪಟ್ಟಿಯನ್ನು (ಚಾರ್ಜ್ಶೀಟ್) ತನಿಖಾಧಿಕಾರಿಗಳು ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಉಗ್ರಗಾಮಿ ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಆರೋಪಿ ದುಷ್ಕೃತ್ಯ ಎಸಗಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಇರಿಸಿದ್ದನು ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು.
ಇದೀಗ ನಾಲ್ಕನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿಯವರು ಆತನನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿದ್ದಲ್ಲದೇ, ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4, 5 ವರ್ಷಗಳ ಕಠಿಣ ಸೆರೆವಾಸ ಮತ್ತು 10000 ರೂ. ದಂಡ, ವಿಫಲವಾದರೆ 6 ತಿಂಗಳ ಜೈಲು ಶಿಕ್ಷೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ರ ಸೆಕ್ಷನ್ 16, 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10000 ದಂಡ. ದಂಡ ಕಟ್ಟಲು ವಿಫಲವಾದರೆ 6 ತಿಂಗಳ ಜೈಲು ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ನಡೆಯಲಿದೆ ಎಂದು ಮಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.












