ಸನ್ಮಾರ್ಗ ವಾರ್ತೆ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ತೀವ್ರ ಅಸ್ವಸ್ಥಗೊಂಡು, ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಜಗನ್ನಾಥ್ ಪಿ ನಿಧನರಾದವರು.
44 ವರ್ಷ ವಯಸ್ಸಿನ ಜಗನ್ನಾಥ್ ಅವರು, 2000 ಇಸವಿಯ ಬ್ಯಾಚ್ ನ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ವಸ್ಧರಾದವರನ್ನು ಕೂಡಲೇ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟರು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ.
ನಿನ್ನೆಯಷ್ಟೇ ವಿಶೇಷ ಕರ್ತವ್ಯದ ಮೇರೆಗೆ ಗೋವಾಕ್ಕೆ ತೆರಳಿ, ವಾಪಾಸಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.












