ಸನ್ಮಾರ್ಗ ವಾರ್ತೆ
ಬೆಂಗಳೂರು: ರಾಜ್ಯದಲ್ಲಿ 2021ರಲ್ಲಿ ಪರಿಶಿಷ್ಟ ಪಂಗಡದ ಜನರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಒಂದೂ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ಪರಿಶಿಷ್ಟ ಜಾತಿಯ ಜನರ ಮೇಲಿನ ದೌರ್ಜನ್ಯದ ಪ್ರಕರಣಗಳಲ್ಲೂ ನ್ಯಾಯದಾನದ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಒಟ್ಟಾರೆ ದಲಿತ ಸಮುದಾಯದ ಜನರ ಮೇಲೆ ದೌರ್ಜನ್ಯ ನಡೆದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣ ರಾಜ್ಯದಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂಬುದಾಗಿ ವರದಿಯಾಗಿದೆ.
ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರ ಮೇಲೆ 458 ದೌರ್ಜನ್ಯ ಪ್ರಕರಣಗಳು 2021ರಲ್ಲಿ ದಾಖಲಾಗಿವೆ. ಇವುಗಳಲ್ಲಿ 128 ಪ್ರಕರಣಗಳು ನ್ಯಾಯಾಲಯದಲ್ಲಿ ವಿಲೇವಾರಿಯಾಗಿದ್ದು 128ರಲ್ಲಿ ಒಂದು ಪ್ರಕರಣ ಮಾತ್ರ ವಜಾ ಆಗಿದ್ದರೆ 127 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದಾರೆ. ಎಲ್ಲದಕ್ಕೂ ಸಾಕ್ಷ್ಯಗಳ ಕೊರತೆಯ ಕಾರಣ ನೀಡಲಾಗಿದೆ. ತನಿಖೆ ಮತ್ತು ಆರೋಪಪಟ್ಟಿ ಸಲ್ಲಿಸುವಲ್ಲಿ ಆಗಿರುವ ಲೋಪಗಳಿಂದ ಹೀಗಾಗಿದ್ದು, ಒಂದೇ ಒಂದು ಪ್ರಕರಣದಲ್ಲಿಯೂ ಶಿಕ್ಷೆಯಾಗಿಲ್ಲ.
ಪರಿಶಿಷ್ಟ ಜಾತಿಯ ಜನರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 2021ರಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಲೇವಾರಿಯಾದ ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಶೇಕಡ 1.6 ರಷ್ಟು ಮಾತ್ರ. 2021ರಲ್ಲಿ 637 ಪ್ರಕರಣಗಳನ್ನು ನ್ಯಾಯಾಲಯಗಳು ವಿಲೇವಾರಿ ಮಾಡಿದೆ. ಅವುಗಳಲ್ಲಿ ಹತ್ತು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. 613 ಪ್ರಕರಣಗಳು ಖುಲಾಸೆಯಾಗಿವೆ. ಒಂಬತ್ತು ಪ್ರಕರಣಗಳು ವಿವಿಧ ಕಾರಣಗಳಿಗೆ ವಜಾ ಆಗಿವೆ.












