ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತನ್ನಿ: ಮಹಾರಾಷ್ಟ್ರ ಸರಕಾರವನ್ನು ಆಗ್ರಹಿಸಿದ ಶಾಸಕ

0
593

ಸನ್ಮಾರ್ಗ ವಾರ್ತೆ

ಮುಂಬೈ: ಮಹಾರಾಷ್ಟ್ರದ ಬಿಜೆಪಿ ಶಾಸಕ ನಿತೀಶ್ ರಾಣೆ ಅವರು ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕಾನೂನು ಜಾರಿಗೆ ಒತ್ತಾಯಿಸಿದ್ದಾರೆ. ರಾಜ್ಯದ ಇತರ ಮಹಿಳಾ ಪ್ರತಿನಿಧಿಗಳೊಂದಿಗೆ ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಬೇಡಿಕೆಯನ್ನು ಪ್ರಸ್ತಾಪಿಸಿದ್ದಾರೆ.

ಗುಜರಾತ್ ಮತ್ತು ಮಧ್ಯಪ್ರದೇಶದಂತೆಯೇ ಮಹಾರಾಷ್ಟ್ರದಲ್ಲಿ ಬಲವಂತದ ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸುವಂತೆ ಕೋರಲಾಗಿದೆ ಎಂದು ನಿತೀಶ್ ರಾಣೆ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಬೇಡಿಕೆಗಳ ಬಗ್ಗೆ ಸಕಾರಾತ್ಮಕ ನಿಲುವು ತಳೆದಿದ್ದು, ಮುಂಬರುವ ತಿಂಗಳುಗಳಲ್ಲಿ ರಾಜ್ಯದಲ್ಲಿ ಕಾನೂನು ತರಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ರಾಣೆ ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ನಾವು ಇನ್ನೂ ನಿರ್ಧರಿಸಿಲ್ಲ. ಆದರೆ ಈ ನಿಟ್ಟಿನಲ್ಲಿ ಇತರ ರಾಜ್ಯಗಳು ಮಾಡಿರುವ ಕಾನೂನುಗಳನ್ನು ಅಧ್ಯಯನ ಮಾಡುತ್ತೇವೆ ಎಂದು ಲವ್ ಜಿಹಾದ್ ವಿರುದ್ಧದ ಕಾನೂನಿನ ಕುರಿತ ಪ್ರಶ್ನೆಗಳಿಗೆ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ.

ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ವಿವಿಧ ರಾಜ್ಯಗಳಲ್ಲಿ ರೂಪಿಸಲಾಗಿರುವ ಕಾನೂನುಗಳನ್ನು ರಾಜ್ಯ ಸರ್ಕಾರ ಅಧ್ಯಯನ ಮಾಡಲಿದೆ ಎಂದು ಫಡ್ನವೀಸ್ ಈ ಹಿಂದೆ ಹೇಳಿಕೆ ನೀಡಿದ್ದರು.