ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಮನ್ಸ್ ಜಾರಿ

0
481

ಸನ್ಮಾರ್ಗ ವಾರ್ತೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್‌ ಜಾರಿ ಮಾಡಿದೆ.

ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪಗಳನ್ನು ಮುಂದಿಟ್ಟು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌ ಅವರು ಮೇ 9 ರಂದು ಕಾಂಗ್ರೆಸ್‌ನ ಮೂವರು ನಾಯಕರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದರು.

ದೂರಿನಲ್ಲಿ, 2023ರ ಮೇ 5ರಂದು ಪತ್ರಿಕೆಗಳಲ್ಲಿ ಪ್ರಕಟವಾದ ಕಾಂಗ್ರೆಸ್ ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರವು 40% ಭ್ರಷ್ಟಾಚಾರದಲ್ಲಿ ತೊಡಗಿದೆ. ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆಯೆಂದು ದೂರಿದ್ದಾರೆ. ಆ ಆರೋಪಗಳು ‘ಆಧಾರ ರಹಿತ’ ಮತ್ತು ‘ಮಾನ ಹಾನಿಕರ’” ಎಂದು ಕೇಶವ ಪ್ರಸಾದ್ ಹೇಳಿಕೊಂಡಿದ್ದಾರೆ.

ಪ್ರಕರಣದ ಕುರಿತು ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದು, “ಬಿಜೆಪಿ ಹತಾಶೆಯಿಂದ ಈ ರೀತಿ ಮಾಡಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಚುನಾವಣೆಯಲ್ಲಿ ಸೋತಿದೆ. ಬಿಜೆಪಿಗರನ್ನು ಜನರು ತಿರಸ್ಕರಿಸಿದ್ದಾರೆ. ಅವರು ಈಗ ಹತಾಶರಾಗಿದ್ದಾರೆ. ಭ್ರಷ್ಟಾಚಾರ ಆರೋಪಗಳ ಬಗ್ಗೆ ಪ್ರಧಾನಿ ತನಿಖೆಗೆ ಆದೇಶಿಸಲಿಲ್ಲ. ಬೊಮ್ಮಾಯಿ ಅದರ ಬಗ್ಗೆ ಕ್ರಮ ಕೈಗೊಂಡಿಲ್ಲ. ನಾವು ಬಿಜೆಪಿಯ ದುರಾಡಳಿತವನ್ನು ಜನರ ಮುಂದಿಟ್ಟೆವು. ಅದರೆ, ಈಗ ಬಿಜೆಪಿಗರು ದೂರು ದಾಖಲಿಸುವ ಪ್ರಹಸನ ನಡೆಸುತ್ತಿದ್ದಾರೆ.” ಎಂದು ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ಹೇಳಿದ್ದಾರೆ.

ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದ ನಂತರ, ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪೇ-ಸಿಎಂ ಅಭಿಯಾನ ನಡೆಸಿತ್ತು. ಭ್ರಷ್ಟಾಚಾರದ ಆರೋಪಗಳನ್ನು ಚುನಾವಣಾ ವಿಷಯವನ್ನಾಗಿಸಿತ್ತು. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಸರ್ಕಾರ ರಚಿಸಿತ್ತು.