ಸನ್ಮಾರ್ಗ ವಾರ್ತೆ
ಗೃಹ ಲಕ್ಷ್ಮಿ ಯೋಜನೆಗೆ ಮಹಿಳೆಯರು ಜೂನ್.16 ರಿಂದ ಅರ್ಜಿ ಸಲ್ಲಿಸಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಬಿಪಿಎಲ್, ಏಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ಹೊಂದಿರುವವರು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
“ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವುದು ಸ್ವಲ್ಪ ವಿಳಂಬವಾಗಿದ್ದು, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ಗಳಲ್ಲಿ ಅರ್ಜಿ ಸಲ್ಲಿಸಬಹುದು. 1902 ಹೆಲ್ಪ್ ಲೈನ್ ಮೂಲಕ ಏನಾದರೂ ಗೊಂದಲಗಳಿದ್ದರೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಜೂನ್ 16ರಂದು ಶುಕ್ರವಾರ ಮಧ್ಯಾಹ್ನ 1.30ಕ್ಕೆ ಶಕ್ತಿ ಭವನದಲ್ಲಿ ‘ಗೃಹ ಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಇದರ ಉಸ್ತುವಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನಡೆಸುತ್ತದೆ.” ಎಂದರು.
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವವರ ಪತಿ ತೆರಿಗೆ ಕಟ್ಟುವವರಾಗಿರಬಾರದು. ತೆರಿಗೆ ಕಟ್ಟುವವರಾಗಿದ್ದರೆ ಅರ್ಜಿ ರಿಜೆಕ್ಟ್ ಆಗಲಿದೆ. ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.












