ಸನ್ಮಾರ್ಗ ವಾರ್ತೆ
ದಿಸಾರ್: ಅಸ್ಸಾಂನ ಸೋನಿತ್ಪುರ ಜಿಲ್ಲೆಯ ಬಹ್ಬರಿ ಗ್ರಾಮದಲ್ಲಿ 30 ವರ್ಷದ ಮಹಿಳೆಯನ್ನು ಸಜೀವ ದಹನ ಮಾಡಲಾಗಿದೆ. ಮಹಿಳೆ ತೀವ್ರ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾಳೆ. ಇದು ವಾಮಾಚಾರದ ಚಿಕಿತ್ಸೆಯ ಭಾಗವಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಸಂಗೀತಾ ಕತಿ ಎಂಬವರು ದುರಂತ ಸಾವನ್ನಪ್ಪಿದ್ದಾರೆ.
ಮಹಿಳೆಯ ಪತಿಯನ್ನು ಕಟ್ಟಿ ಹಾಕಿ ಬಳಿಕ ಆಕೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಂಧಿತರ ವಿಚಾರಣೆ ಬಳಿಕವೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಕೂಡಲೇ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಆಕೆ ಮೃತಪಟ್ಟಿದ್ದಾಳೆ.
ಬಂಧಿತರು 30 ರಿಂದ 35 ವರ್ಷ ವಯಸ್ಸಿನವರು. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಂತೆ ಹೆಚ್ಚಿನ ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.












