ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರು ಪಕ್ಷ ತೊರೆದು ಶಿವಸೇನಾ ಸೇರಿಕೊಂಡಿರುವುದಾಗಿ ಘೋಷಿಸಿದ್ದು, ತಮ್ಮ ರಾಜಿನಾಮೆ ಪತ್ರವನ್ನು ಪಕ್ಷದ ಮುಖಂಡರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.
ತಮ್ಮ ಜೊತೆ ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್ ಕಾರ್ಯಕರ್ತರ ಅಮಾನತನ್ನು ತೆರವುಗೊಳಿಸಿದ್ದಕ್ಕೆ ಅಸಮಾಧಾನಗೊಂಡಿರುವ ಪ್ರಿಯಾಂಕ ಈ ಬಗ್ಗೆ ಟ್ವೀಟ್ ಮಾಡಿದ್ದರು. ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಸೇವೆ ಸಲ್ಲಿಸಿದ ಅವರು ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನ ಪಕ್ಷದಲ್ಲಿ ಸಿಗುತ್ತಿಲ್ಲವೆಂದು ತಿಳಿಸಿದ್ದಾರೆ.
ಇತ್ತೀಚೆಗೆ ಉತ್ತರ ಪ್ರದೇಶದ ಮಥುರಾದಲ್ಲಿ ಪತ್ರಿಕಾಗೋಷ್ಠಿ ನಡೆಸುವ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾ ಚತುರ್ವೇದಿ ಜೊತೆ ಅನುಚಿತವಾಗಿ ವರ್ತಿಸಿದ್ದರು.ಇದೀಗ ಲೋಕಸಭಾ ಚುನಾವಣೆ ಬೆನ್ನಲ್ಲೇ ಪ್ರಿಯಾಂಕ ಚತುರ್ವೇದಿ ಕಾಂಗ್ರೆಸ್ ಪಕ್ಷದ ನಡೆಗೆ ಬೇಸತ್ತು ಶಿವಸೇನಾ ಸೇರಿಕೊಂಡಿದ್ದು ಮಹಿಳೆಯರಿಗೆ ಶಿವಸೇನಾದಲ್ಲಿ ಪ್ರಾಧಾನ್ಯತೆ ಇರುವುದಾಗಿ ಹೇಳಿದ್ದಾರೆ. ಅಲ್ಲದೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ವಕ್ತಾರೆ ಎನ್ನುವುದನ್ನು ತೆಗೆದು ಹಾಕಿದ್ದಾರೆ.












