ಬಿಲ್ಕಿಸ್ ಬಾನು ಪ್ರಕರಣ| ಗುಜರಾತ್ ಸರ್ಕಾರ ಸಲ್ಲಿಸಿದ್ದ ಪುನ‌ರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

0
246

ಸನ್ಮಾರ್ಗ ವಾರ್ತೆ

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದೀಗ, ನ್ಯಾಯಾಲಯವು ತನ್ನ ತೀರ್ಪನ್ನು ಮರು ಪರಿಶೀಲಿಸಬೇಕೆಂದು ಗುಜರಾತ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋದ್ರಾ ಹತ್ಯಾಕಾಂಡದ ವೇಳೆ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಆದರೆ, ಇತ್ತೀಚೆಗೆ ಅಪರಾಧಿಗಳನ್ನು ಸನ್ನಡತೆಯ ಆಧಾರದ ಮೇಲೆ, ಕ್ಷಮಾದಾನ ನೀಡಿ ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿ, ಜೈಲಿಗೆ ಶರಣಾಗುವಂತೆ ಅಪರಾಧಿಗಳಿ ಸೂಚನೆ ನೀಡಿತ್ತು.

ಸುಪ್ರೀಂ ಕೋರ್ಟ್‌ ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಗುಜರಾತ್‌ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಮತ್ತು ಉಜ್ಜಲ ಭುಯಾನ್ ಅವರಿದ್ದ ನ್ಯಾಯಪೀಠ, ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ.

“ಪುನರ್ ಪರಿಶೀಲನಾ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಆದೇಶ ತೃಪ್ತಿದಾಯಕವಾಗಿದೆ. ಪುನರ್ ಪರಿಶೀಲಿಸಲು ಯಾವುದೇ ಸೂಕ್ತ ಸಾಕ್ಷಾಧಾರಗಳಿಲ್ಲ. ಹೀಗಾಗಿ, ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.