ರಾಹುಲ್ ವಿರುದ್ಧ ಅರ್ಜಿ ಸಲ್ಲಿಸಿದವರಿಗೇ ದಂಡ ವಿಧಿಸಿದ ಹೈಕೋರ್ಟ್; ದ್ವೇಷ ಭಾಷಣ ಆರೋಪ

0
177

ಸನ್ಮಾರ್ಗ ವಾರ್ತೆ

ಬೆಂಗಳೂರು: ‘ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಹರಡಿದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು , ಅರ್ಜಿದಾರರಿಗೆ ₹25 ಸಾವಿರ ದಂಡ ವಿಧಿಸಿದೆ.

400 ಹೆಣ್ಣು ಮಕ್ಕಳ ಮೇಲೆ ಪ್ರಜ್ವಲ್ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಪ್ರಚಾರ ಮತ್ತು ದ್ವೇಷ ಭಾಷಣ ಮಾಡಿ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲಾಗಿತ್ತು.

ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಚಿ.ನಾ.ರಾಮು ಮತ್ತು ಸಮಿತಿಯ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿದ್ದು, ವಾದ ಆಲಿಸಿದ ನ್ಯಾಯಪೀಠ, ‘ಈ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಮಾತ್ರವಲ್ಲದೆ ಅರ್ಜಿದಾರರಿಗೆ ₹25 ಸಾವಿರ ದಂಡ ವಿಧಿಸಿದೆ. ಈ ದಂಡ ಮೊತ್ತವನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಪಾವತಿಸಬೇಕು ಎಂದು ಆದೇಶಿಸಿದೆ.