2026 ರಲ್ಲಿ ಅಸ್ಸಾಂ ಜನತೆ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುತ್ತಾರೆ: ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್

0
557

ಸನ್ಮಾರ್ಗ ವಾರ್ತೆ

ಗುವಾಹಟಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರಾಜ್ಯದ ಜನರು
ಸಜ್ಜಾಗಿದ್ದಾರೆ ಎಂದು ಅಸ್ಸಾಂ ಘಟಕದ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭಾ ಸಂಸದ ಗೌರವ್ ಗೊಗೊಯ್ ಅವರು ಶುಕ್ರವಾರ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಟೀಕಿಸಿ ಹೇಳಿದ್ದಾರೆ.

“ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ರಾಜ್ಯದ ಜನತೆಯಿಂದ ನಮಗೆ ಸಿಗುತ್ತಿರುವ ಅಭೂತಪೂರ್ವ ಬೆಂಬಲದಿಂದ ಇದು ಸಂಪೂರ್ಣವಾಗಿ ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ ರಾಜ್ಯಾದ್ಯಂತ ನಡೆದ ಬ್ಲಾಕ್ ಮಟ್ಟದ ಸಭೆಗಳಲ್ಲಿ ನಿರೀಕ್ಷೆಗಿಂತ ಮಿಗಿಲಾಗಿ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರು ಭಾಗವಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಜನರು ಬಯಸುತ್ತಾರೆ ಎಂಬುದನ್ನು ಇದು ತೋರಿಸುತ್ತದೆ. ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವಲ್ಲಿ ನಾಗರಿಕ ಸಮಾಜದ ಪಾತ್ರ ಬಹಳ ಮುಖ್ಯ ಎಂದು ಅವರು ಹೇಳಿದರು.

ಕೆಲವು ವಾರಗಳ ಹಿಂದೆ ಲೋಕಸಭಾ ಸಂಸದ ಗೌರವ್ ಗೊಗೊಯ್ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ಪಾಕಿಸ್ತಾನದ ಐಎಸ್‌ಐಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದ ಸಮಯದಲ್ಲಿಯೇ ಈ ನೇಮಕಾತಿ ನಡೆದಿದ್ದು, ಗೊಗೊಯ್ ಅವರು ಈ ಕುರಿತು ಶರ್ಮಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2026 ರ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ ಕಾಂಗ್ರೆಸ್ ತನ್ನ ಕಾರ್ಯತಂತ್ರ ಮತ್ತು ಸಂಘಟನೆಯನ್ನು ಮರುಪರಿಶೀಲಿಸುವ ನಿರೀಕ್ಷೆಯಿದೆ.