ನಮ್ಮದು ವಸುಧೈವ ಕುಟುಂಬಕಂ ತತ್ವ, ಯಾರಿಗೂ ತಾರತಮ್ಯ ಮಾಡಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

0
282

ಸನ್ಮಾರ್ಗ ವಾರ್ತೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಯೋತ್ಪಾದಕರು ಧರ್ಮ ಮತ್ತು ಹೆಸರನ್ನು ಕೇಳಿ ಅಮಾಯಕರ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಆದರೆ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆಗಳಲ್ಲಿ ಎಂದಿಗೂ ಧರ್ಮವನ್ನು ಕೇಳುವುದಿಲ್ಲ, ಬದಲಿಗೆ ಭಯೋತ್ಪಾದಕರ ದುಷ್ಕೃತ್ಯಗಳ ಆಧಾರದ ಮೇಲೆ ಅವರನ್ನು ನಿಗ್ರಹಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ರಾಜಸ್ಥಾನದ ಜೋಧಪುರದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಕಳೆದ ಏಪ್ರಿಲ್‌ನಲ್ಲಿ ಪಹಲ್ಗಾಮ್ ಕಣಿವೆಯಲ್ಲಿ ನಡೆದ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ ಘಟನೆಯನ್ನು ಉಲ್ಲೇಖಿಸಿದರು. ಆ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂಧೂರ್’ ನಡೆಸಿದೆ. ಭಾರತವು ‘ವಸುಧೈವ ಕುಟುಂಬಕಂ’ ಎಂಬ ತತ್ವವನ್ನು ನಂಬುವ ದೇಶವಾಗಿದ್ದು, ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಯಾರಿಗೂ ತಾರತಮ್ಯ ಮಾಡುವುದಿಲ್ಲವೆಂದು ಅವರು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರವು ಈ ಆಪರೇಷನ್‌ನ್ನು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಸೇರಿಸಲು ತೀರ್ಮಾನಿಸಿದ್ದು, 3ನೇ ತರಗತಿಯಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ವಿಶೇಷ ಮಾಡ್ಯೂಲ್‌ಗಳ ಮೂಲಕ ಪಾಠ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಕಳೆದುಕೊಂಡ ಮಹಿಳೆಯರ ತ್ಯಾಗಕ್ಕೆ ಗೌರವ ಸೂಚಿಸುವ ಉದ್ದೇಶದಿಂದಲೇ ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಡಲಾಗಿದೆ.