ಸನ್ಮಾರ್ಗ ವಾರ್ತೆ
ಬೆಂಗಳೂರು: ರಾಜ್ಯ ಸರ್ಕಾರವು ಕಾಸಿಲ್ಲದ ನಿಗಮಗಳ ಅಧ್ಯಕ್ಷರಿಗೆ ಮಂತ್ರಿ ದರ್ಜೆ ನೀಡಿರುವುದು ರಾಜಕೀಯವಾಗಿ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಜನಸಾಮಾನ್ಯರ ಸಂಕಷ್ಟಗಳನ್ನು ನಿರ್ಲಕ್ಷಿಸುವ ಕ್ರಮವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ವಕೀಲರು ತಾಹಿರ್ ಹುಸೇನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನರು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೆಟ್ರೋ ಪ್ರಯಾಣ ದರ ಹೆಚ್ಚಳ ಹಾಗೂ ರೈತರಿಗೆ ಸಾಲ ಮನ್ನಾ ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಸಂಕಷ್ಟಕರ ಪರಿಸ್ಥಿತಿಯಲ್ಲಿ ಸರ್ಕಾರವು ಬಡ ಹಾಗೂ ಮಧ್ಯಮ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾಗಿದೆ. ಆದರೆ ಸರ್ಕಾರವು ಒಂದೆಡೆ ಗ್ಯಾರಂಟಿ ಯೋಜನೆಗಳ ಕಾರಣದಿಂದ ಆರ್ಥಿಕ ಒತ್ತಡವಿದೆ ಎಂದು ಹೇಳಿಕೊಂಡು, ಮತ್ತೊಂದೆಡೆ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ನೀಡುತ್ತಿರುವುದು ಪರಸ್ಪರ ವಿರುದ್ಧವಾದ ನಡೆ ಎಂದು ತಾಹಿರ್ ಹುಸೇನ್ ಹೇಳಿದ್ದಾರೆ.
ಮುಖ್ಯಮಂತ್ರಿಗಳು “ಎಲ್ಲವೂ ಸಮರ್ಪಕವಾಗಿ ನಡೆಯುತ್ತಿದೆ” ಎಂದು ಹೇಳುವುದಾದರೆ, ಈ ಕ್ರಮವು ಯಾವ ತರ್ಕಕ್ಕೆ ಒಳಪಡುವುದು ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಗ್ರಹಿಸಿದೆ.
ಇದೇ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ರಾಜ್ಯಕ್ಕೆ ಬಾಕಿ ಇರುವ ಜಿಎಸ್ಟಿ ಹಾಗೂ ಇತರೆ ಅನುದಾನಗಳನ್ನು ಬಿಡುಗಡೆ ಮಾಡುವಲ್ಲಿ ಮೀನಮೇಷ ಮಾಡುತ್ತಿರುವುದು ಕೂಡ ದುರಾಡಳಿತದ ಸ್ಪಷ್ಟ ಉದಾಹರಣೆಯಾಗಿದ್ದು, ಇದನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.












