ಸನ್ಮಾರ್ಗ ವಾರ್ತೆ
ಹೊಸದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿದ ದೌರ್ಜನ್ಯಗಳನ್ನು ಆರೋಪಿಸಿ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಜುಲೈ 27 ರಂದು ನಡೆಸಲು ಇಂದು (ಜುಲೈ 24, ಶುಕ್ರವಾರ) ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.
ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಗೋಪಾಲ್ ಶಂಕರನಾರಾಯಣನ್ ಅವರು ಈ ವಿಷಯವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಪೀಠವನ್ನು ಒತ್ತಾಯಿಸಿದ ಶಂಕರನಾರಾಯಣನ್, ಎರಡೂ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಅವುಗಳಿಗೆ ಸಂಖ್ಯೆ ನೀಡಿರುವುದಾಗಿ ತಿಳಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ವಿದ್ಯಾರ್ಥಿಗಳು ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಜುಲೈ 20 ರಂದು ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆಯಿತು. ಸಂಸತ್ತಿನತ್ತ ಸಾಗಲು ಯತ್ನಿಸುತ್ತಿದ್ದ ಜನಸ್ತೋಮವನ್ನು ಚದುರಿಸಲು ಭದ್ರತಾ ಸಿಬ್ಬಂದಿ ಲಾಠಿ ಮತ್ತು ಅಶ್ರುವಾಯುವನ್ನು ಬಳಸಿದರು.
ನೀಟ್ ಪರೀಕ್ಷಾ ಸೋರಿಕೆ ಹಗರಣದ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದರು.












