ಸನ್ಮಾರ್ಗ ವಾರ್ತೆ
ಉಡುಪಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಯಿತು.
ಯಶ್ಪಾಲ್ ಸುವರ್ಣ ಅವರ ಹೇಳಿಕೆ ಸಾರ್ವಜನಿಕ ಜೀವನದ ಗೌರವಕ್ಕೆ ಧಕ್ಕೆ ತರುವಂತಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕ ಸುಭಾಷ್ ಚಂದ್ರ ಶೆಟ್ಟಿ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಮಂಜುಳಾ ನಾಯಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.












