ಸನ್ಮಾರ್ಗ ವಾರ್ತೆ
ಪುತ್ತೂರು: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಕಳವು ಪ್ರಕರಣ ನಡೆದಿತ್ತು. ಬಂಧಿತ ಆರೋಪಿ ಸತೀಶ್ ಕೇರಳ ರಾಜ್ಯದ ಕಾಸರಗೋಡು ನಿವಾಸಿಯಾಗಿದ್ದು, ಅಂತರ್ರಾಜ್ಯ ಕಳ್ಳತನ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 24ರ ರಾತ್ರಿ ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಸ್ಥಾನದ ಹೊರಗಡೆ ಇರಿಸಲಾಗಿದ್ದ ಕಾಣಿಕೆ ಡಬ್ಬಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಎತ್ತಿಕೊಂಡು ಹೋಗಿದ್ದ. ಆಗಸ್ಟ್ 25ರಂದು ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ ಬಿ. ಅವರು ದೇವಸ್ಥಾನಕ್ಕೆ ಬಂದಾಗ ಕಾಣಿಕೆ ಡಬ್ಬಿ ನಾಪತ್ತೆಯಾಗಿತ್ತು. ತಕ್ಷಣವೇ ದೇವಸ್ಥಾನದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳ್ಳತನದ ಕೃತ್ಯ ಬೆಳಕಿಗೆ ಬಂದಿದೆ.
ಕಾಣಿಕೆ ಡಬ್ಬಿಯಲ್ಲಿದ್ದ ಅಂದಾಜು 4,500 ರುಪಾಯಿ ನಗದು ಹಾಗೂ ₹2,500 ರೂಪಾಯಿ ಮೌಲ್ಯದ ಡಬ್ಬಿ ಸೇರಿ ಕಳವಾಗಿದೆ ಎಂದು ವಿನೋದ್ ಕುಮಾರ್ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನತ್ತಿದ ತನಿಖಾ ತಂಡವು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಿತ್ತು. ಕಾರ್ಯಾಚರಣೆ ವೇಳೆ ಬದಿಯಡ್ಕದಲ್ಲಿ ಕಾಸರಗೋಡಿನ ಸತೀಶ್ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ ಕಳವು ಮಾಡಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಅಂದಾಜು 1 ಲಕ್ಷ ರೂ. ಮೌಲ್ಯದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ಸತೀಶ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ವಿರುದ್ಧ ಈಗಾಗಲೇ ಕೇರಳದ ಬದಿಯಡ್ಕ ಪೊಲೀಸ್ ಠಾಣೆಯಲ್ಲೂ ಅಡಿಕೆ ಕಳ್ಳತನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.












