ಸನ್ಮಾರ್ಗ ವಾರ್ತೆ
ನವದೆಹಲಿ: ವಿದ್ಯಾರ್ಥಿಗಳು ವಾಸಿಸುತ್ತಿದ್ದರೆನ್ನಲಾದ ಐದು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿರುವ ದುರಂತಕ್ಕೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸುಮಾರು 40–50 ವಿದ್ಯಾರ್ಥಿಗಳು ಕಟ್ಟಡದೊಳಗೆ ಇದ್ದರೆಂಬ ಆತಂಕದ ಹಿನ್ನೆಲೆಯಲ್ಲಿ, ರಕ್ಷಣಾ ಕಾರ್ಯಾಚರಣೆ, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಸಹಾಯ ಒದಗಿಸುವುದು ಪ್ರಸ್ತುತ ಅತ್ಯಂತ ಆದ್ಯತೆಯ ವಿಷಯವಾಗಿದೆ ಎಂದು ಎಸ್ಐಒ ತಿಳಿಸಿದೆ.
ಎಸ್ಐಒ ರಾಷ್ಟ್ರೀಯ ನಾಯಕರು ಸ್ಥಳದಲ್ಲೇ ಉಪಸ್ಥಿತರಿದ್ದು, ಸ್ಥಳೀಯ ಸ್ವಯಂಸೇವಕರು ಹಾಗೂ ರಕ್ಷಣಾ ಸಿಬ್ಬಂದಿಯೊಂದಿಗೆ ಕೈಜೋಡಿಸಿ ಅವಶೇಷಗಳನ್ನು ತೆರವುಗೊಳಿಸುವುದು ಸೇರಿದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಈ ದುರಂತವು ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯಲ್ಲಿರುವ ಗಂಭೀರ ಕೊರತೆಗಳನ್ನೂ ಮತ್ತೊಮ್ಮೆ ಬಹಿರಂಗಪಡಿಸಿದೆ. ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ನಲ್ಲಿ ಸಮರ್ಪಕ ಸಂಖ್ಯೆಯಲ್ಲಿ ಹಾಸ್ಟೆಲ್ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ದುಬಾರಿ ಬಾಡಿಗೆ ನೀಡಿ ಖಾಸಗಿ ಪಿಜಿಗಳಲ್ಲಿ (PG) ವಾಸಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಲವು ಪಿಜಿಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯ ಜೊತೆಗೆ ಸುರಕ್ಷತಾ ಮಾನದಂಡಗಳ ಪಾಲನೆಯೂ ಸಮರ್ಪಕವಾಗಿಲ್ಲ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ನಿಯಂತ್ರಣವಿಲ್ಲದ ವಸತಿ ಮಾರುಕಟ್ಟೆಯ ಜವಾಬ್ದಾರಿಗೆ ಬಿಟ್ಟುಬಿಡಲು ಸರ್ಕಾರ ಹಾಗೂ ವಿಶ್ವವಿದ್ಯಾಲಯಕ್ಕೆ ಸಾಧ್ಯವಿಲ್ಲ. ಖಾಸಗಿ ಪಿಜಿಗಳ ತಕ್ಷಣದ ಸುರಕ್ಷತಾ ಪರಿಶೀಲನೆ (Safety Audit), ಕಡ್ಡಾಯ ನೋಂದಣಿ, ಸುರಕ್ಷತಾ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಹಾಗೂ ಹೊಣೆಗಾರಿಕೆಯ ನಿಗದಿತ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಎಸ್ಐಒ ಆಗ್ರಹಿಸಿದೆ.
ಅದೇ ರೀತಿ, ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಸುರಕ್ಷಿತ ವಸತಿ ಒದಗಿಸಲು ಸರ್ಕಾರಿ ಮತ್ತು ವಿಶ್ವವಿದ್ಯಾಲಯದ ಹಾಸ್ಟೆಲ್ಗಳ ಸಂಖ್ಯೆಯನ್ನು ತುರ್ತಾಗಿ ಹೆಚ್ಚಿಸಬೇಕು. ಈ ದುರಂತಕ್ಕೆ ಕಾರಣವಾದ ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಎಸ್ಐಒ ಒತ್ತಾಯಿಸಿದೆ.
ವಿದ್ಯಾರ್ಥಿಗಳ ಜೀವ ಅಮೂಲ್ಯ. ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವರ ಜೀವವನ್ನು ಬಲಿಕೊಡಲಾಗದು. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲ್ಯಾಣವನ್ನು ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಅತ್ಯುನ್ನತ ಆದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ಆಗ್ರಹಿಸಿದೆ.












