ಸನ್ಮಾರ್ಗ ವಾರ್ತೆ
ಮಂಗಳೂರು: ನಗರದ ಎಮ್ಮೆಕೆರೆಯಲ್ಲಿರುವ ಶ್ರೀ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ನಡೆದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದ ವೇಳೆ ಕಾರಿಡಾರ್‌ನ ತಡೆಗೋಡೆ ಕುಸಿದು ಬಿದ್ದು, ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಮಹಮ್ಮದ್ ಶಮಾಝ್ ಎಂದು ಗುರುತಿಸಲಾಗಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ. ವೈದ್ಯರ ಪ್ರಕಾರ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಅವರು ‘ಬ್ರೈನ್ ಡೆಡ್’ ಹಂತದಲ್ಲಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಸಭಾಂಗಣದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಿದ್ದರು. ಸಭಾಂಗಣದೊಳಗೆ ಜಾಗದ ಕೊರತೆಯಿಂದ ಹಲವು ವಿದ್ಯಾರ್ಥಿಗಳು ಹೊರಗಿನ ಕಾರಿಡಾರ್‌ನಲ್ಲಿ ನಿಂತಿದ್ದರು. ಈ ವೇಳೆ ಕಾರಿಡಾರ್‌ನ ದುರ್ಬಲ ತಡೆಗೋಡೆಗೆ ವಿದ್ಯಾರ್ಥಿಗಳು ಒರಗಿ ನಿಂತಿದ್ದಾಗ, ಅವರ ಭಾರವನ್ನು ತಡೆದುಕೊಳ್ಳಲಾಗದೆ ತಡೆಗೋಡೆ ಕುಸಿದಿದೆ. ಪರಿಣಾಮವಾಗಿ ವಿದ್ಯಾರ್ಥಿಗಳು ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಗಾಯಗೊಂಡ ಆರು ಮಂದಿ ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಮ್ಮದ್ ಶಮಾಝ್ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದ ಐವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ತನಿಖೆ ಮುಂದುವರಿದಿದೆ.












