ಸನ್ಮಾರ್ಗ ವಾರ್ತೆ
ಮಂಗಳೂರು: ನಗರದ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ನಡೆದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ (19) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.
ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯುತ್ತಿದ್ದ ವೇಳೆ ಹಾಲ್ನ ಬಾಲ್ಕನಿ ಭಾಗದ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿತ್ತು. ಈ ವೇಳೆ ತಡೆಗೋಡೆಯ ಬಳಿ ನಿಂತಿದ್ದ ಐವರು ವಿದ್ಯಾರ್ಥಿಗಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.
ಘಟನೆಯ ಬಳಿಕ ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶಮ್ಮಾಝ್ ಅವರ ಮೆದುಳು ಶನಿವಾರ ರಾತ್ರಿ ನಿಷ್ಕ್ರಿಯಗೊಂಡಿತ್ತು. ವೈದ್ಯರು ನಿರಂತರವಾಗಿ ಚಿಕಿತ್ಸೆ ಮುಂದುವರಿಸಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೆ ಅವರು ಕೊನೆಯುಸಿರೆಳೆದಿದ್ದಾರೆ.
ಆಯೋಜಕರು ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಎಫ್ಐಆರ್
ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯ ವಹಿಸಿ ಸಾವಿಗೆ ಕಾರಣರಾದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.












