SIR ವಿರುದ್ಧ ಆರು ತಿಂಗಳ ನಿರಂತರ ಜಾಗೃತಿ ಆಂದೋಲನ: ಪರಿಶೋಧನಾ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

0
340

ಸನ್ಮಾರ್ಗ ವಾರ್ತೆ

ಬೆಂಗಳೂರು: SIR (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ಕಳೆದ ಆರು ತಿಂಗಳಿನಿಂದ ನಿರಂತರವಾಗಿ ಜಾಗೃತಿ ಮತ್ತು ಪ್ರತಿರೋಧ ಆಂದೋಲನ ನಡೆಸಲಾಗಿದ್ದು, ರಾಜ್ಯ ಸರ್ಕಾರದೊಂದಿಗೆ ಸಂಘರ್ಷ ಹಾಗೂ ಸಮನ್ವಯದ ಮೂಲಕ ಹೋರಾಟವನ್ನು ಮುಂದುವರಿಸಲಾಗಿದೆ ಎಂದು SIR ವಿರೋಧಿ ಒಕ್ಕೂಟ–ಕರ್ನಾಟಕ ತಿಳಿಸಿದೆ.

ಈ ಅವಧಿಯಲ್ಲಿ ಎರಡು ಹಂತಗಳಲ್ಲಿ ರಾಜ್ಯ ಪ್ರವಾಸ ಕೈಗೊಂಡು, ಚುನಾವಣಾ ಆಯೋಗದ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೀತಿಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಗರಿಷ್ಠ ಪ್ರಯತ್ನ ಮಾಡಲಾಗಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆಯಿಂದಾಗಿ ತೊಂದರೆಗೊಳಗಾದವರ ಮನೆಗಳಿಗೆ ತೆರಳಿ ಅಧ್ಯಯನ ನಡೆಸಿ, ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳೊಂದಿಗೆ ವಿಷಯಗಳನ್ನು ದಾಖಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಇದರ ಮುಂದುವರಿದ ಭಾಗವಾಗಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಗೋಪಾಲಗೌಡ ಹಾಗೂ ಬಹುಭಾಷಾ ನಟ ಮತ್ತು ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಅವರು ವರದಿಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕ-ನಿರ್ಮಾಪಕ ಬಿ. ಸುರೇಶ್, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎಲ್.ಎನ್. ಮುಕುಂದರಾಜ್, ರಂಗನಟ ಹಾಗೂ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬಳಿಕ ಸಂಜೆ ವರದಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಚರ್ಚೆಯಲ್ಲಿ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಒಕ್ಕೂಟ ಎತ್ತಿರುವ ಆಕ್ಷೇಪಗಳು, ಚುನಾವಣಾ ಆಯೋಗದ ಕ್ರಮಗಳು ಹಾಗೂ ಬಿಜೆಪಿ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಯಿತು ಎಂದು ತಿಳಿಸಲಾಗಿದೆ.

‘SIR ವಿರೋಧಿ ಒಕ್ಕೂಟ–ಕರ್ನಾಟಕ’ದ ವತಿಯಿಂದ ಪ್ರಕಾಶ್ ರೈ ಅವರ ನೇತೃತ್ವದಲ್ಲಿ ನಡೆದ ಪ್ರತಿರೋಧ ಪ್ರವಾಸದಲ್ಲಿ ಪಾಲ್ಗೊಂಡ ಜನಪರ ಸಂಘಟನೆಗಳ ಪ್ರತಿನಿಧಿಗಳು, ಜಾತ್ಯತೀತ ಪಕ್ಷಗಳ ಮುಖಂಡರು, ಬರಹಗಾರರು ಹಾಗೂ ವಿವಿಧ ಕ್ಷೇತ್ರಗಳ ಹೋರಾಟಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.