ಸನ್ಮಾರ್ಗ ವಾರ್ತೆ
ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸುವಂತೆ, ಎಸ್ ಐ ಆರ್ ಅನ್ನು ರದ್ದುಗೊಳಿಸಲು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿ, ದೆಹಲಿಗೆ ಆಗಮಿಸುತ್ತಿರುವ ಪ್ರತಿಭಟನಾಕಾರರನ್ನು ಮಾರ್ಗಮಧ್ಯದಲ್ಲೇ ಬಂಧಿಸಲಾಗುತ್ತಿದೆ ಹಾಗೂ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ, 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿರುವ ಕ್ರಮವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡಿಸಿದೆ.
ಈ ಬಗ್ಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಂ ಅಹ್ಮದ್ ಹೇಳಿಕೆ ಬಿಡುಗಡೆ ಮಾಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ನಾಗರಿಕರ ಸಂವಿಧಾನಬದ್ಧ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಮುಖ ಭಾಗವಾಗಿದೆ. ಸರ್ಕಾರದ ನೀತಿಗಳು, ಆಡಳಿತಾತ್ಮಕ ನಿರ್ಧಾರಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ತಮ್ಮ ಅಸಮಾಧಾನವನ್ನು ಶಾಂತಿಯುತವಾಗಿ ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಈ ಹಕ್ಕನ್ನು ಗೌರವಿಸುವುದು ಪ್ರಜಾಪ್ರಭುತ್ವ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರವು ಪ್ರತಿಭಟನೆಯನ್ನು ತಡೆಗಟ್ಟಲು ಈ ರೀತಿಯ ಕ್ರಮ ಕೈಗೊಂಡಿರುವುದು ಸಂವಿಧಾನ ವಿರೋಧಿ ನಡೆ ಎಂದು ತಿಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನೆಪದಲ್ಲಿ ಶಾಂತಿಯುತ ಪ್ರತಿಭಟನೆಗೆ ಅನಗತ್ಯ ನಿರ್ಬಂಧಗಳನ್ನು ವಿಧಿಸುವುದು, ಪ್ರತಿಭಟನಾಕಾರರನ್ನು ದೆಹಲಿಗೆ ತಲುಪುವ ಮುನ್ನವೇ ಬಂಧಿಸುವುದು ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸುವುದು ನಾಗರಿಕರ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಕಾರ್ಯವೈಖರಿಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಭದ್ರತಾ ಕ್ರಮಗಳು ಅಗತ್ಯವಾಗಿದ್ದರೂ ಅವು ಕಾನೂನುಬದ್ಧ, ಅನುಪಾತಬದ್ಧ ಮತ್ತು ಸಾರ್ವಜನಿಕ ಹಕ್ಕುಗಳಿಗೆ ಗೌರವ ನೀಡುವಂತಿರಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಒತ್ತಾಯಿಸಿದೆ.
ದೇಶದ ರಾಜಧಾನಿಯಲ್ಲಿಯೇ ಜನರು ತಮ್ಮ ಬೇಡಿಕೆಗಳನ್ನು ಮುಂದಿಡಲು ಅಡೆತಡೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನು ದಮನಿಸುವುದಕ್ಕಿಂತ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಪ್ರತಿಭಟನೆ ನಡೆಸುವವರನ್ನು ಶತ್ರುಗಳಂತೆ ಪರಿಗಣಿಸುವ ಬದಲು ಅವರ ಅಹವಾಲುಗಳನ್ನು ಆಲಿಸಲು ಸರ್ಕಾರ ಮುಂದಾಗಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕವು ಒತ್ತಾಯಿಸಿದೆ:
ಪ್ರಜಾಪ್ರಭುತ್ವದ ಶಕ್ತಿ ಜನರ ಧ್ವನಿಯಲ್ಲಿದೆ; ಆ ಧ್ವನಿಯನ್ನು ಆಲಿಸುವುದೇ ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಗೌರವಿಸುವ ಮೂಲಕವೇ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ಸಾಧ್ಯ. ಕೇಂದ್ರ ಸರ್ಕಾರವು ಸಂಘರ್ಷದ ಬದಲು ಸಂವಾದದ ಹಾದಿಯನ್ನು ಆಯ್ಕೆ ಮಾಡಿಕೊಂಡು, ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹಿಸಿದೆ.












