ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಉಡುಪಿಯಲ್ಲಿ ಸಾಲಿಡಾರಿಟಿ ಪ್ರತಿಭಟನೆ; ಇದು ಪ್ರಜಾಪ್ರಭುತ್ವದ ಆತ್ಮವನ್ನು ರಕ್ಷಿಸುವ ಹೋರಾಟ” – ನಿಹಾಲ್ ಕಿದಿಯೂರು

0
259

ಸನ್ಮಾರ್ಗ ವಾರ್ತೆ

ಉಡುಪಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ವೇಳೆ ವಶಕ್ಕೆ ಪಡೆದ ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಉಡುಪಿ ವತಿಯಿಂದ ಅಜ್ಜರಕಾಡಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಮುಖಂಡ ನಿಹಾಲ್ ಕಿದಿಯೂರು, “ಇದು ಕೇವಲ ಒಂದು ಪ್ರತಿಭಟನೆಯಲ್ಲ; ಪ್ರಜಾಪ್ರಭುತ್ವದ ಆತ್ಮವನ್ನು ರಕ್ಷಿಸುವ ಹೋರಾಟವಾಗಿದೆ. ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದ್ದು, ಒಂದು ಗೋಡ್ಸೆಯ ಸಿದ್ಧಾಂತವಾದರೆ ಮತ್ತೊಂದು ಗಾಂಧಿಯ ಸಿದ್ಧಾಂತವಾಗಿದೆ” ಎಂದರು.

“ನಮ್ಮ ಮಾರ್ಗ ಸದಾ ಗಾಂಧಿಯ ಮಾರ್ಗವಾಗಿದೆ. ಆದರೆ, ಬಿಜೆಪಿ ಸರ್ಕಾರ ಗಾಂಧಿಯನ್ನು ಗೋಡ್ಸೆ ಗುಂಡಿಕ್ಕಿ ಹತ್ಯೆ ಮಾಡಿದ ರೀತಿಯಲ್ಲಿ ನಮ್ಮ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ಪ್ರತಿಭಟನೆಗಳ ಮೇಲಿನ ನಿರ್ಬಂಧಗಳು ಹಾಗೂ ಮುಸೊಲಿನಿ ಮತ್ತು ಹಿಟ್ಲರ್‌ರ ಮಾರ್ಗವನ್ನು ಅನುಸರಿಸುತ್ತಿರುವ ಸರ್ಕಾರದ ಧೋರಣೆ ಸ್ವಾತಂತ್ರ್ಯದ ನಿಜವಾದ ಅರ್ಥಕ್ಕೆ ಧಕ್ಕೆ ತರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬಂಧನಕ್ಕೊಳಗಾದ ರಾಜಕೀಯ ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.

ನಂತರ ಮಾತನಾಡಿದ ಅಮೃತ್ ಶೆಣೈ, ಚುನಾವಣಾ ಆಯೋಗವು ಸಂಪೂರ್ಣ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಇಂದು ಅಕ್ರಮಗಳ ಮೂಲಕ ಆಯೋಗ ಅಸಂವಿಧಾನಿಕವಾಗಿ ವರ್ತಿಸುತ್ತಿದೆ ಎಂಬ ಗಂಭೀರ ಆರೋಪಗಳಿವೆ. ಇಂತಹ ಸಂವಿಧಾನ ವಿರೋಧಿ ಕ್ರಮಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಪ್ರತಿಯೊಬ್ಬರೂ ನಿಜವಾದ ದೇಶಪ್ರೇಮಿಗಳಾಗಿದ್ದಾರೆ ಎಂದು ಹೇಳಿದರು.

ಸುಂದರ್ ಮಾಸ್ತರ್ ಮಾತನಾಡಿ, ಹಿಂದೂ-ಮುಸ್ಲಿಮರ ಹೆಸರಿನಲ್ಲಿ ರಾಜಕೀಯ ನಡೆಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿದೆ ಎಂದು ಆರೋಪಿಸಿದರು. ಗ್ಯಾನೇಶ್ ಕುಮಾರ್ ಅವರು ದೇಶದ ಪಾರದರ್ಶಕ ಚುನಾವಣಾ ವ್ಯವಸ್ಥೆಗೆ ದ್ರೋಹ ಎಸಗಿರುವುದು ಸಾಬೀತಾಗಿದೆ ಎಂದು ಪ್ರತಿಪಾದಿಸಿದ ಅವರು, ಕೂಡಲೇ ರಾಜೀನಾಮೆ ನೀಡಿ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಇದ್ರಿಸ್ ಹೂಡೆ ಸೇರಿದಂತೆ ಇತರರು ಮಾತನಾಡಿದರು.

ಈ ಸಂದರ್ಭದಲ್ಲಿ ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ, ಅಲ್ಪಸಂಖ್ಯಾತ ವೇದಿಕೆಯ ಅಧ್ಯಕ್ಷ ಚಾರ್ಲ್ಸ್ ಅಂಬ್ಲೈರ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಸಯೀದ್ ಫರೀದ್, ಮಂಜುನಾಥ್ ಗಿಳಿಯಾರು, ಶ್ಯಾಮ್‌ರಾಜ್ ಬಿರ್ತಿ, ಕುಲ್ಸುಮ್ ಅಬುಬಕ್ಕರ್, ಅಬ್ದುಲ್ ಅಝೀಜ್ ಉದ್ಯಾವರ, ಎಸ್‌ಐಒದ ನಿಫಾಲ್ ಕಿದಿಯೂರು, ನಿಸಾರ್ ಉಡುಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಅರ್ಪಿಸಿದರು.