ಸನ್ಮಾರ್ಗ ವಾರ್ತೆ
ಲಕ್ನೋ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಖುಲಾಸೆಗೊಳಿಸಲಾಗಿದೆ. ಉತ್ತರ ಪ್ರದೇಶದ ಸುಲ್ತಾನ್ಪುರ ಎಂಪಿ-ಎಮ್ಎಲ್ಎ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ಕ್ರಿಮಿನಲ್ ಮಾನನಷ್ಟ ಪ್ರಕರಣದಿಂದ ಖುಲಾಸೆಗೊಳಿಸಿದೆ. ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಶುಭಂ ವರ್ಮಾ ಅವರು ಈ ತೀರ್ಪನ್ನು ಪ್ರಕಟಿಸಿದ್ದಾರೆ. ತೀರ್ಪು ಪ್ರಕಟವಾದಾಗ ರಾಹುಲ್ ಗಾಂಧಿ ನ್ಯಾಯಾಲಯದಲ್ಲಿ ಹಾಜರಿದ್ದರು.
2018 ರ ಕರ್ನಾಟಕ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಅಂದಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆಯುವ ಮೂಲಕ ಅಪಮಾನಿಸಿದ್ದಾರೆ ಎಂಬುದು ದೂರಾಗಿತ್ತು. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದಾಗ್ಯೂ, ವಿಚಾರಣೆಯ ಸಮಯದಲ್ಲಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ತಮ್ಮ ವಿರುದ್ಧದ ಆರೋಪಗಳು ಸುಳ್ಳು ಮತ್ತು ತಮ್ಮ ಹೇಳಿಕೆಗಳನ್ನು ಸಂದರ್ಭದಿಂದ ಹೊರತೆಗೆದು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದರು.
ವರ್ಷಗಳ ಕಾಲ ನಡೆದ ದೀರ್ಘ ಕಾನೂನು ಹೋರಾಟದ ನಂತರ ರಾಹುಲ್ ಗಾಂಧಿ ಪರವಾಗಿ ನ್ಯಾಯಾಲಯದ ತೀರ್ಪು ಬಂದಿದೆ. ರಾಹುಲ್ ಗಾಂಧಿ ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು. ಪ್ರಕರಣದ ವಾದ-ಪ್ರತಿವಾದಗಳು ಪೂರ್ಣಗೊಂಡ ನಂತರ ಇಂದು ಅಂತಿಮ ತೀರ್ಪು ಹೊರಬಿದ್ದಿದೆ.












