ಸನ್ಮಾರ್ಗ ವಾರ್ತೆ
ಕಲ್ಲಡ್ಕ: ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ 2025–26ನೇ ಸಾಲಿನ ವಿದ್ಯಾರ್ಥಿಗಳ 11ನೇ ಪದವಿ ಪ್ರದಾನ ಸಮಾರಂಭವು ಅನುಗ್ರಹ ಆಡಿಟೋರಿಯಂನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಯಿತು.
ಅನುಗ್ರಹ ವಿದ್ಯಾಸಂಸ್ಥೆಯ ಕರೆಸ್ಪಾಂಡೆಂಟ್ ಅಮನುಲ್ಲಾ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದೆ ಮಹಿಳೆಯರು ಹಲವು ರೀತಿಯ ಸಾಮಾಜಿಕ ದೌರ್ಜನ್ಯ ಹಾಗೂ ತಾರತಮ್ಯಗಳನ್ನು ಎದುರಿಸುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದ್ದು, ಹೆಣ್ಣುಮಕ್ಕಳು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಈ ಬದಲಾವಣೆಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಅನುಗ್ರಹ ವಿದ್ಯಾಸಂಸ್ಥೆ ಇಂದು ವಿದ್ಯಾರ್ಥಿಗಳಷ್ಟೇ ಅಲ್ಲದೆ, ಪೋಷಕರ ಮೆಚ್ಚಿನ ಶಿಕ್ಷಣ ಸಂಸ್ಥೆಯಾಗಿಯೂ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರ. ಸಾಮಾನ್ಯವಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೂ ಪ್ರವೇಶ ನೀಡಿ, ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನದ ಮೂಲಕ ಶೇ.100ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಶುಲ್ಕ ಪಾವತಿಸಲು ಅಸಮರ್ಥರಾದ ವಿದ್ಯಾರ್ಥಿಗಳಿಗೂ ಯಾವುದೇ ತಾರತಮ್ಯವಿಲ್ಲದೆ ಶಿಕ್ಷಣದ ಅವಕಾಶ ಕಲ್ಪಿಸಿ, ಅವರು ಪದವಿ ಪಡೆಯಲು ಸಂಸ್ಥೆ ನೆರವಾಗುತ್ತಿದೆ. ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ಪ್ರತಿಭೆಯನ್ನು ಗುರುತಿಸಿ ಸಂಸ್ಥೆಗೆ ಹಲವು ಪ್ರಶಸ್ತಿ ಮತ್ತು ಗೌರವಗಳು ಲಭಿಸಿವೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಜಿನಿಯರ್ ಇಬ್ರಾಹಿಂ ಶಿವಮೊಗ್ಗ ಮಾತನಾಡಿ, ಪದವಿ ಪಡೆಯುವುದಷ್ಟೇ ವಿದ್ಯಾರ್ಥಿಗಳ ಗುರಿಯಾಗಬಾರದು. ಸಮಾಜದ ಬಗ್ಗೆಯೂ ಸಾಮಾಜಿಕ ಜವಾಬ್ದಾರಿ ಇರಬೇಕು. ಗಂಡು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಇದು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹೆಣ್ಣುಮಕ್ಕಳಂತೆ ಗಂಡು ಮಕ್ಕಳೂ ಶಿಕ್ಷಣದ ಮುಖ್ಯವಾಹಿನಿಗೆ ಬರಬೇಕು. ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯಲು ಶ್ರಮಿಸಬೇಕು ಎಂದು ಕರೆ ನೀಡಿದರು.
ಇನ್ನೋರ್ವ ಮುಖ್ಯ ಅತಿಥಿ, ಕುಡ್ಕೊಳಿ ವಾಟರ್ ಪ್ರಾಜೆಕ್ಟ್ನ ಸಿಇಒ ಅಬ್ದುಲ್ಲಾ ಮದುಮೂಳೆ ಮಾತನಾಡಿ, ಶಿಕ್ಷಣ ಎಲ್ಲೆಡೆ ದೊರೆಯುತ್ತದೆ. ಆದರೆ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಚಾರಿತ್ರ್ಯ ರೂಪಿಸುವ ತರಬೇತಿ ನೀಡುವ ಶಿಕ್ಷಣ ಸಂಸ್ಥೆಗಳು ಅಪರೂಪ. ಅಂತಹ ಸಂಸ್ಥೆಗಳಲ್ಲಿ ಅನುಗ್ರಹ ವಿದ್ಯಾಸಂಸ್ಥೆಯೂ ಒಂದಾಗಿರುವುದು ಹೆಮ್ಮೆಯ ವಿಚಾರ ಎಂದು ಅಭಿಪ್ರಾಯಪಟ್ಟರು.
ಅನುಗ್ರಹ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಾ. ಹೇಮಲತ ಬಿ. ಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ಸಂಸ್ಥೆಯ ಪ್ರಗತಿಯ ಕುರಿತು ಮಾತನಾಡಿದರು.

ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಯಾಸಿನ್ ಬೇಗ್ ವಹಿಸಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ನುಹಾ ಮರಿಯಮ್ ಹೈದರ್ ಕಿರಾತ್ ಪಠಿಸಿದರು. ಇಝ ಫಾತಿಮ ಮತ್ತು ತಂಡ ಪ್ರಾರ್ಥನಾ ಗೀತೆ ಹಾಡಿದರು. ವಿದ್ಯಾರ್ಥಿನಿ ಸಾರ ಮೈಮುನ ಸ್ವಾಗತಿಸಿದರು. ಫಾತಿಮಾತ್ ಶಮಿಯ ಮತ್ತು ಶಮ ಶಹರಿನ್ ಕಾರ್ಯಕ್ರಮ ನಿರೂಪಿಸಿದರು. ಹುದ್ನ ಫಾತಿಮಾ ಮತ್ತು ತಂಡ ಗಾಯನ ಪ್ರಸ್ತುತಪಡಿಸಿದರು. ಶೌರತ್ ಬಾನು ವಂದಿಸಿದರು.
ಕಾರ್ಯಕ್ರಮದಲ್ಲಿ ಇಂಕ್ವಿಲಾಬ್ ಪತ್ರಿಕೆಯ ಸಂಪಾದಕ ಮುದಾಸ್ಸಿರ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












