ಸರ್ಕಾರಿ ಶಾಲೆಗಳ ಖಾಸಗೀಕರಣ ವಿರುದ್ಧ ಎಸ್‌ಐಒ ದಕ್ಷಿಣ ಕನ್ನಡ ವತಿಯಿಂದ ಪ್ರತಿಭಟನೆ

0
16

ಸನ್ಮಾರ್ಗ ವಾರ್ತೆ

ಮಂಗಳೂರು: ಸರ್ಕಾರಿ ಶಾಲೆಗಳ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಗಳನ್ನು ತೊಡಗಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ಶಿಕ್ಷಣದ ಹಕ್ಕು (RTE) ಕಾಯ್ದೆಯನ್ನು ಕಾಲಮಿತಿಯಲ್ಲಿ ಜಾರಿಗೊಳಿಸುವಂತೆ ಆಗ್ರಹಿಸಿ ಎಸ್‌ಐಒ ದಕ್ಷಿಣ ಕನ್ನಡ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಕೀಲ ನಿಹಾಲ್ ಮೊಹಮ್ಮದ್, ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದರು. ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಶಿಕ್ಷಣದ ಹಕ್ಕು ಕಾಯ್ದೆಯ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವತ್ತ ಸರ್ಕಾರ ಗಮನಹರಿಸಬೇಕು ಎಂದು ಅವರು ಹೇಳಿದರು.

ಮುನೀರ್ ಪದ್ರಂಗಿ ಮಾತನಾಡಿ, ಸರ್ಕಾರಿ ಶಾಲೆಗಳ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ಹಾಗೂ CSR ನಿಧಿಗಳ ಬಳಕೆಯ ಕುರಿತು ಕಳವಳ ವ್ಯಕ್ತಪಡಿಸಿದರು. CSR ನಿಧಿಗಳನ್ನು ಬಳಸುವಾಗ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಸೈಯದ್ ಮುಸ್ತಫಾ ರಜ್ವಿ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನಡುವೆ ಶಿಕ್ಷಣದ ಗುಣಮಟ್ಟದಲ್ಲಿ ವ್ಯತ್ಯಾಸ ಇರಬಾರದು. ಸರ್ಕಾರಿ ಶಾಲೆಗಳನ್ನು ಆಧುನಿಕಗೊಳಿಸುವ ಅಗತ್ಯವಿದ್ದು, ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ಶಿಕ್ಷಣ ಮತ್ತು ಹೊಸ ತಂತ್ರಜ್ಞಾನಗಳನ್ನು ಶಿಕ್ಷಣದಲ್ಲಿ ಬಳಸಬೇಕು ಎಂದು ಹೇಳಿದರು.

ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ಸರ್ಕಾರದ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದನ್ನು ತಡೆಯುವುದು ಹಾಗೂ RTE ಕಾಯ್ದೆಯನ್ನು ಕಾಲಮಿತಿಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್‌ಐಒ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬ್ರ. ಮೊಹಮ್ಮದ್ ಮುಸ್ತಫಾ ವಹಿಸಿದ್ದರು.