ಗಾಂಧಿ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲು

0
13

ಸನ್ಮಾರ್ಗ ವಾರ್ತೆ

ಗಾಂಧಿ ಕುಟುಂಬದ ಮೂವರು ಸದಸ್ಯರ ಸಾವಿನ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ರೀತಿಯಲ್ಲಿ ಪರೋಕ್ಷವಾಗಿ ಉಲ್ಲೇಖಿಸಿರುವ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ಸಂಸದೆ ಕಂಗನಾ ರಣಾವತ್ ಅವರ ವಿರುದ್ಧ ಶುಕ್ರವಾರ ಶಿಮ್ಲಾದಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ದೂರಿನ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು ಮತ್ತು ಮಾನನಷ್ಟಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿರುವುದಾಗಿ ಉಲ್ಲೇಖಿಸಲಾಗಿದೆ.

ಮಂಗಳವಾರ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ರಣಾವತ್ ಅವರು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ ಸಂಜಯ್ ಗಾಂಧಿ ಅವರ ಸಾವುಗಳನ್ನು, ನಂತರದ ಸೋನಿಯಾ ಗಾಂಧಿ ಅವರ ರಾಜಕೀಯ ಏಳಿಗೆಯೊಂದಿಗೆ ತಾಳೆಹಾಕಿ (ಹೋಲಿಕೆ ಮಾಡಿ) ಬರೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ ಎಂದು ‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಣಾವತ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಹಿಮಾಚಲ ಪ್ರದೇಶದ ಪೊಲೀಸ್ ಮುಖ್ಯಸ್ಥರಿಗೆ ಕಳುಹಿಸಿರುವ ಪತ್ರದಲ್ಲಿ, ಬಿಜೆಪಿ ಸಂಸದೆಯ ಈ ಹೇಳಿಕೆಗಳು ದಾರಿತಪ್ಪಿಸುವ ಅಭಿಪ್ರಾಯಗಳನ್ನು ಮೂಡಿಸಬಹುದು ಎಂದು ದೂರುದಾರರು ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್’ (Belonging) ಬಿಡುಗಡೆಯಾದ ದಿನದಂದೇ ಈ ಹೇಳಿಕೆ ಹೊರಬಿದ್ದಿತ್ತು.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್, ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.