ಸನ್ಮಾರ್ಗ ವಾರ್ತೆ
ರಾಂಚಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಶಾಸಕರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ದೈಹಿಕ ಹಲ್ಲೆ, ಬಲವಂತದ ಮನೆಗೆಲಸ ಮತ್ತು ಬಲವಂತದ ಗರ್ಭಪಾತದಂತಹ ಗಂಭೀರ ಆರೋಪಗಳನ್ನು ಮಾಡಲಾಗಿದೆ.
ವಿದ್ಯಾಭ್ಯಾಸ ಕೊಡಿಸುವ ಭರವಸೆ ನೀಡಿ ಅವರು ಮಗುವನ್ನು ತಮ್ಮ ಅಧಿಕೃತ ನಿವಾಸಕ್ಕೆ ಕರೆತಂದಿದ್ದರು. ಆದರೆ, ಶಾಲೆಗೆ ಕಳುಹಿಸುವ ಬದಲು ಮನೆಗೆಲಸ ಮಾಡಿಸಿಕೊಂಡಿದ್ದಾರೆ. ಬಳಿಕ ಚಿತ್ರಹಿಂಸೆ ನೀಡಿದ್ದಾರೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಮತ್ತು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬೇರೆ ಬೇರೆ ಕಡೆ ಎಸೆಯುವುದಾಗಿ ಬೆದರಿಕೆ ಹಾಕಿದ್ದರು. ಈ ಸಂಬಂಧ ಮಗು ಆಗಸ್ಟ್ 5ರಂದು ಪೊಲೀಸರಿಗೆ ದೂರು ನೀಡಿದೆ. ಶಾಸಕರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ವಿರೋಧ ಪಕ್ಷಗಳೊಂದಿಗೆ ಸೇರಿಕೊಂಡು ಮಾಜಿ ಕಾಂಗ್ರೆಸ್ ನಾಯಕರು ನಡೆಸಿರುವ ಪಿತೂರಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಮಧ್ಯೆ, ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಪಕ್ಷವು ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಾಸಕರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಮುಂದೆ ಬಂದಿದೆ. ಘಟನೆಯ ಬಗ್ಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಮೌನದ ವಿರುದ್ಧವೂ ಬಿಜೆಪಿ ರಾಜ್ಯ ಅಧ್ಯಕ್ಷ ಆದಿತ್ಯ ಸಾಹು ಧ್ವನಿ ಎತ್ತಿದ್ದು, ಶಾಸಕರನ್ನು ತಕ್ಷಣವೇ ಬಂಧಿಸದಿದ್ದರೆ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.












