ಸಿಇಟಿ ಜನಿವಾರ ತೆಗೆದ ಪ್ರಕರಣ: ಹೈಕೋರ್ಟ್ ಇತ್ಯರ್ಥ

0
6

ಸನ್ಮಾರ್ಗ ವಾರ್ತೆ

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದೆ.

ಈ ಸಂಬಂಧ ಕೆಇಎ ನೀಡಿರುವ ಸ್ಪಷ್ಟನೆ ದಾಖಲಿಸಿಕೊಂಡಿರುವ ಹೈಕೋರ್ಟ್, ರಾಜ್ಯಾದ್ಯಂತ ಏಕರೂಪವಾಗಿ ಪರೀಕ್ಷೆ ನಡೆಸುವಂತೆ ಸೂಚಿಸಿದೆ.

ಆದರೆ, ಜನಿವಾರ ತೆಗೆಸಿದ ಕ್ರಮದ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಪ್ರತ್ಯೇಕ ತೀರ್ಪು ನೀಡಿಲ್ಲ ಎಂಬುದೂ ಗಮನಾರ್ಹ.

2025ರ ಏಪ್ರಿಲ್‌ನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ಬೀದರ್ ಮತ್ತು ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಭಾರೀ ವಿವಾದ ಸೃಷ್ಟಿಸಿತ್ತು. ಬೀದರ್‌ನಲ್ಲಿ ಜನಿವಾರ ಧರಿಸಿದ್ದರಿಂದ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದೆ ವಿದ್ಯಾರ್ಥಿಯೊಬ್ಬ ವಾಪಸ್ ತೆರಳಿದ್ದ. ಈ ಪ್ರಕರಣದಲ್ಲಿ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಶಿವಮೊಗ್ಗದಲ್ಲೂ ಇಬ್ಬರು ಹೋಮ್‌ಗಾರ್ಡ್‌ಗಳನ್ನು ಅಮಾನತು ಮಾಡಲಾಗಿತ್ತು.

ಈ ಘಟನೆ ಪ್ರಶ್ನಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಜನಿವಾರ ಧರಿಸುವ ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆಯಾಗದಂತೆ ಸ್ಪಷ್ಟ ಮಾರ್ಗಸೂಚಿ ರೂಪಿಸಬೇಕು ಎಂಬುದು ಅರ್ಜಿಯ ಪ್ರಮುಖ ಬೇಡಿಕೆಯಾಗಿತ್ತು.

ಇದೀಗ ವಿಚಾರಣೆ ವೇಳೆ ಕೆಇಎ, ಜನಿವಾರ ತೆಗೆಸುವಂತೆ ಯಾವುದೇ ನಿಯಮ ಅಥವಾ ಸೂಚನೆ ಇಲ್ಲ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಪರೀಕ್ಷಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾನವ ಹಕ್ಕುಗಳ ಮತ್ತು ಮಕ್ಕಳ ಹಕ್ಕುಗಳ ಆಯೋಗಗಳಿಗೂ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದೆ.

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಪರೀಕ್ಷೆಗಳನ್ನು ರಾಜ್ಯಾದ್ಯಂತ ಸುವ್ಯವಸ್ಥಿತವಾಗಿ ಮತ್ತು ಏಕರೂಪವಾಗಿ ನಡೆಸುವಂತೆ ಸೂಚಿಸಿ ಪಿಐಎಲ್ ಇತ್ಯರ್ಥಪಡಿಸಿದೆ.