ಸನ್ಮಾರ್ಗ ವಾರ್ತೆ
ಬೆಂಗಳೂರು: ರಾಜ್ಯದ ಆರೋಗ್ಯ ವ್ಯವಸ್ಥೆಯ ಬಲವರ್ಧನೆಯಲ್ಲಿ ಆಶಾ (ASHA) ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರ ಆರೋಗ್ಯದ ಕಾಳಜಿ ವಹಿಸುವುದು, ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯದ ಮೇಲ್ವಿಚಾರಣೆ, ಲಸಿಕಾ ಕಾರ್ಯಕ್ರಮಗಳು ಹಾಗೂ ವಿವಿಧ ಆರೋಗ್ಯ ಜಾಗೃತಿ ಕಾರ್ಯಗಳಲ್ಲಿ ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ಇಷ್ಟೊಂದು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಅವರ ಬದುಕು ಮಾತ್ರ ಇಂದಿಗೂ ಆರ್ಥಿಕ ಮತ್ತು ಸಾಮಾಜಿಕ ಅನಿಶ್ಚಿತತೆಯಿಂದ ಕೂಡಿದೆ. ನವೆಂಬರ್ 17ರಿಂದ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ತಿಳಿಸಿದೆ.
ಕಳೆದ ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯರಿಗೆ ನೀಡಿರುವ ಹಲವು ಭರವಸೆಗಳು ಈವರೆಗೂ ಈಡೇರಿಲ್ಲ. 2025ರ ಜನವರಿಯಲ್ಲಿ ನೀಡಿದ್ದ ₹10,000 ಗೌರವಧನದ ಭರವಸೆ ಕೂಡ ಇನ್ನೂ ಜಾರಿಯಾಗಿಲ್ಲ. ಸುಮಾರು ಒಂಬತ್ತು ವರ್ಷಗಳಿಂದ ಕೇವಲ ₹1,500 ಗೌರವಧನ ಹೆಚ್ಚಳವಾಗಿರುವುದು ಅವರ ಸೇವೆಗೆ ಸರ್ಕಾರ ನೀಡುತ್ತಿರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ ಕೇವಲ 2,000 ರೂ. ನೀಡುತ್ತಿದ್ದರೆ, ರಾಜ್ಯ ಸರ್ಕಾರ 5,000 ರೂ. ಗೌರವ ಧನ ಹಾಗೂ 1,000 ರೂ. ಪ್ರೋತ್ಸಾಹ ಧನ (ಇನ್ಸೆಂಟೀವ್) ಸೇರಿ ಒಟ್ಟು 8,000 ರೂ. ಪಾವತಿಸುತ್ತಿದೆ.
ಕೇರಳ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಸುಮಾರು ₹12,000 ನಿಗದಿತ ಗೌರವಧನ ನೀಡಲಾಗುತ್ತಿದೆ. ಆದರೆ, ದೇಶದಲ್ಲಿ ಅತಿ ಹೆಚ್ಚು ಜಿಎಸ್ಟಿ ಸಂಗ್ರಹಿಸುವ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿಗೆ ನ್ಯಾಯಯುತ ಗೌರವಧನ ನೀಡಲು ಸಾಧ್ಯವಾಗದಿರುವುದು ವಿಷಾದನೀಯ ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ತಿಳಿಸಿದ್ದಾರೆ.
ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡಿರುವ ಭರವಸೆಯಂತೆ ಗೌರವಧನವನ್ನು ಹೆಚ್ಚಿಸಿ, ನ್ಯಾಯಯುತ ಮಾಸಿಕ ಗೌರವಧನ ಖಚಿತಪಡಿಸಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಆಶಾ ಕಾರ್ಯಕರ್ತೆಯರನ್ನು ಕೇವಲ ಸ್ವಯಂಸೇವಕರಂತೆ ಪರಿಗಣಿಸದೆ, ಕಾರ್ಮಿಕರೆಂದು ಗುರುತಿಸಿ ಅವರಿಗೆ ಅಗತ್ಯವಿರುವ ಕಾರ್ಮಿಕ ಹಕ್ಕುಗಳು ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು, ಮುಷ್ಕರ ನಿರತ ಆಶಾ ಕಾರ್ಯಕರ್ತೆಯರೊಂದಿಗೆ ಸರ್ಕಾರ ತಕ್ಷಣ ಮಾತುಕತೆ ನಡೆಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂಬುದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಪ್ರಮುಖ ಆಗ್ರಹ ಎಂದು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಅತ್ಯಂತ ಪ್ರಮುಖ ಕೊಂಡಿಯಾಗಿದ್ದಾರೆ. ಅವರ ಶ್ರಮ ಮತ್ತು ಸೇವೆಯನ್ನು ಕಡೆಗಣಿಸಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಸಾಧ್ಯವಿಲ್ಲ. ಜನರ ಆರೋಗ್ಯಕ್ಕಾಗಿ ನಿರಂತರವಾಗಿ ದುಡಿಯುವ ಈ ಮಹಿಳಾ ಕಾರ್ಯಕರ್ತೆಯರ ಬದುಕು ಗೌರವಯುತವಾಗಿರಬೇಕು. ಆದ್ದರಿಂದ ರಾಜ್ಯ ಸರ್ಕಾರವು ಮುಷ್ಕರವನ್ನು ನಿರ್ಲಕ್ಷಿಸದೆ ತಕ್ಷಣ ಮಧ್ಯಪ್ರವೇಶಿಸಿ, ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.












