ಸನ್ಮಾರ್ಗ ವಾರ್ತೆ
ಕೋಲ್ಕತ್ತಾ,: ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು (Facial recognition technology) ಬಳಸಿಕೊಂಡು, ಜನವರಿ 2ರಿಂದ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಲು ಪಶ್ಚಿಮ ಬಂಗಾಳ ಸರ್ಕಾರ ಯೋಜಿಸುತ್ತಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ರಾಜ್ಯಾದ್ಯಂತ ಈ ವ್ಯವಸ್ಥೆಯನ್ನು ಜಾರಿಗೊಳಿಸುವ ಮುನ್ನ ಡಿಸೆಂಬರ್ನಲ್ಲಿ ಪ್ರಾಯೋಗಿಕ ಯೋಜನೆಯನ್ನು (ಪೈಲಟ್ ಪ್ರಾಜೆಕ್ಟ್) ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ. “ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸುವುದರಿಂದ ಶಾಲೆಗೆ ಬರುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲು ಸಹಾಯವಾಗುತ್ತದೆ” ಎಂದು ರಾಜ್ಯ ಶಿಕ್ಷಣ ಸಚಿವ ದೀಪಕ್ ಬರ್ಮನ್ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರಕಾರ, ಈ ವ್ಯವಸ್ಥೆಯು 1ನೇ ತರಗತಿಯಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಒಳಗೊಳ್ಳಲಿದೆ. ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿರಲಿದ್ದು, ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಕೃತಕ ಬುದ್ಧಿಮತ್ತೆ ಆಧಾರಿತ (AI-based) ವ್ಯವಸ್ಥೆಯನ್ನು ಬಳಸಲಾಗುವುದು ಎಂದು ಅವರು ಹೇಳಿದ್ದಾರೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ರಾಜ್ಯದ ಸುಮಾರು 1.60 ಕೋಟಿ ವಿದ್ಯಾರ್ಥಿಗಳು ಮತ್ತು 4 ಲಕ್ಷ ಶಿಕ್ಷಕರು ಈ ಹೊಸ ಹಾಜರಾತಿ ವ್ಯವಸ್ಥೆಯ ವ್ಯಾಪ್ತಿಗೆ ಬರಲಿದ್ದಾರೆ.












