ಅಯೋಧ್ಯೆಯ ನಂತರ, ಬದರಿನಾಥ ದೇವಸ್ಥಾನದಲ್ಲಿ ದೇಣಿಗೆ ದುರುಪಯೋಗದ ಆರೋಪ

0
217

ಸನ್ಮಾರ್ಗ ವಾರ್ತೆ

ಉತ್ತರಾಖಂಡದ ಬದರಿನಾಥ ದೇವಸ್ಥಾನದಲ್ಲಿ ದೇಣಿಗೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳ ಕುರಿತು ಶ್ರೀ ಬದರಿನಾಥ ಕೇದಾರನಾಥ ದೇವಾಲಯ ಸಮಿತಿಯು ಶುಕ್ರವಾರ ತನಿಖೆಗೆ ಆದೇಶಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೇಣಿಗೆ ಎಣಿಕೆಯಲ್ಲಿ ತೊಡಗಿದ್ದ ಎಲ್ಲಾ ನೌಕರರು ಮತ್ತು ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ ತಿಳಿಸಿರುವುದಾಗಿ ಎಎನ್‌ಐ ಉಲ್ಲೇಖಿಸಿದೆ.

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ದೇಣಿಗೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿಬಂದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ದೇವಾಲಯವನ್ನು ನಿರ್ವಹಿಸುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿನಂತಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ ಮತ್ತು ಅದರ ಶಿಫಾರಸುಗಳ ಆಧಾರದ ಮೇಲೆ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಎಸ್‌ಐಟಿ ಶೀರ್ಘ್ರದಲ್ಲಿ ಅಂತಿಮ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ಬದರಿನಾಥ ದೇವಸ್ಥಾನದ ಮೇಲಿನ ಆರೋಪಗಳನ್ನು ಡೆಹ್ರಾಡೂನ್ ಮೂಲದ ಭೈರವ್ ಸೇನಾ ಸಂಘಟನೆ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬದರಿನಾಥ ದೇವಾಲಯದ ಆವರಣದ ಕಣ್ಗಾವಲು ಕ್ಯಾಮೆರಾ (CCTV) ದೃಶ್ಯಾವಳಿಗಳನ್ನು ಶುಕ್ರವಾರ ಪರಿಶೀಲಿಸಲಾಗಿದೆ ಎಂದು ದೇವಾಲಯ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಹನ್ ಸಿಂಗ್ ರಂಗದ್ ಹೇಳಿದ್ದಾರೆ. ಆದಾಗ್ಯೂ, ಯಾವುದೇ ನಿರ್ಣಾಯಕ ಪುರಾವೆಗಳು ಪತ್ತೆಯಾಗಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ತನಿಖಾ ಸಮಿತಿಯು ಲಭ್ಯವಿರುವ ಪುರಾವೆಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳ ಆಧಾರದ ಮೇಲೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಿಟಿಐ ವರದಿ ಮಾಡಿದೆ. ತನಿಖಾ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ದ್ವಿವೇದಿ ಹೇಳಿದ್ದಾರೆ.