ಸನ್ಮಾರ್ಗ ವಾರ್ತೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ಅನ್ಯಾಯದ ವಿರುದ್ಧ ದೇಶದ ಯುವ ಸಮೂಹ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ, ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸುವ ಮೂಲಕ ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಮುಸ್ಲಿಂ ಜನತಾ ಒಕ್ಕೂಟದ ಅಧ್ಯಕ್ಷ ಸಿರಾಜ್ ಬಜ್ಪೆ ಹೇಳಿದ್ದಾರೆ.
ಮೋದಿ ಸರ್ಕಾರದ ವೈಫಲ್ಯಗಳು ಬಹಿರಂಗವಾಗುತ್ತಿರುವ ಈ ಸಂದರ್ಭದಲ್ಲಿ, ಮೂಲ ಸಮಸ್ಯೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಸಿ.ಟಿ. ರವಿಯವರು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಬೇಜವಾಬ್ದಾರಿಯ ನಡೆ. ಒಬ್ಬ ಮಾಜಿ ಶಾಸಕ ಹಾಗೂ ಮಾಜಿ ಸಚಿವರಿಗೆ ಇಂತಹ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಮೊದಲು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಂಟಾದ ಅನ್ಯಾಯದ ಕುರಿತು ಸಿ.ಟಿ. ರವಿಯವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದ ವಿಚಾರದ ಬಗ್ಗೆ ಮಾತನಾಡದೆ, ಪದೇ ಪದೇ ಮುಸ್ಲಿಂ ಸಮುದಾಯವನ್ನು ಕೆರಳಿಸುವ ರೀತಿಯ ಹೇಳಿಕೆಗಳನ್ನು ನೀಡುವುದು ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವಂತದ್ದು ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟವನ್ನು ಬೆಂಬಲಿಸುವ ಬದಲು, ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನಗಳನ್ನು ಕೈಬಿಡಬೇಕು. ಸಿ.ಟಿ. ರವಿಯವರು ಮೊದಲು ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಕ್ಷಮೆಯಾಚಿಸಿ, ನಂತರ ಇತರ ವಿಷಯಗಳ ಬಗ್ಗೆ ಮಾತನಾಡಲಿ ಎಂದು ಸಿರಾಜ್ ಬಜ್ಪೆ ಆಗ್ರಹಿಸಿದ್ದಾರೆ.
ಇದೇ ರೀತಿಯ ಪ್ರಚೋದನಕಾರಿ ಹೇಳಿಕೆಗಳು ಮುಂದುವರಿದಲ್ಲಿ, ಸಮಾಜದ ಸಾಮರಸ್ಯದ ಹಿತದೃಷ್ಟಿಯಿಂದ ಸಿ.ಟಿ. ರವಿಯವರ ವಿರುದ್ಧ ರಾಜ್ಯವ್ಯಾಪಿ ಪ್ರಜಾಸತ್ತಾತ್ಮಕ ಹೋರಾಟವನ್ನು ಸಂಘಟಿಸುವ ಅನಿವಾರ್ಯತೆ ಎದುರಾಗಬಹುದು ಎಂದು ದಕ್ಷಿಣ ಕನ್ನಡ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಸಿರಾಜ್ ಬಜ್ಪೆ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.












