ಗೌಡ ಸಮುದಾಯಕ್ಕೆ ಸ್ಥಾನ ನೀಡುವಂತೆ ಆಗ್ರಹ
ಸನ್ಮಾರ್ಗ ವಾರ್ತೆ
ಮಂಗಳೂರು : ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ಒಕ್ಕಲಿಗ, ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘವು ಮೂರು ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದೆ.
ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲೋಕಯ್ಯ ಗೌಡ, ‘ಪ್ರಮುಖ ಕೃಷಿಕ ವರ್ಗವಾಗಿರುವ ಒಕ್ಕಲಿಗ ಗೌಡರು ಜಿಲ್ಲೆಯಲ್ಲಿ ಬಹು ಸಂಖ್ಯಾತರಾಗಿದ್ದಾರೆ. ಪುತ್ತೂರು ತಾಲ್ಲೂಕಿನ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 50ರಷ್ಟು, ಸುಳ್ಯ ತಾಲೂಕಿನಲ್ಲಿ ಶೇಕಡಾ 65ರಷ್ಟು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಶೇಕಡಾ 45ರಷ್ಟು ಮತದಾರರು ಗೌಡ ಜನಾಂಗದವರು. ಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 3.5 ಲಕ್ಷದಷ್ಟು ಮತದಾರರು ನಮ್ಮ ಸಮುದಾಯವರು. ಮತದಾರರು ಅಭ್ಯರ್ಥಿಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುವ ಸಾಮರ್ಥ್ಯ ಹೊಂದಿರುವ ಸಂಖ್ಯಾಬಲವನ್ನು ಪರಿಗಣಿಸದೆ ನಮ್ಮ ಸಮಾಜವನ್ನು ರಾಜಕೀಯವಾಗಿ ಕಡೆಗಣಿಸಲಾಗಿದೆ’ ಎಂದು ಅಸಮಾಧಾನ ತೋಡಿಕೊಂಡರು.
‘ಚುನಾವಣೆಯಲ್ಲಿ ಗೌಡ ಸಮುದಾಯದವರಿಗೆ ಬಹಳ ಕಡಿಮೆ ಅವಕಾಶಗಳು ಸಿಗುತ್ತಿವೆ. ಜಾತಿ ಆಧಾರದಲ್ಲಿ ಸೀಟು ಹಂಚುವ ರಾಜಕೀಯ ಪಕ್ಷಗಳು ಗೌಡ ಸಮಾಜವನ್ನು ಮೊದಲಿನಿಂದಲೂ ಕಡೆಗಣಿಸುತ್ತಲೇ ಬಂದಿವೆ. ಹಾಗಾಗಿ ಜಿಲ್ಲೆಯಲ್ಲಿ ನಮ್ಮ ಸಮುದಾಯಕ್ಕೆ ರಾಜಕೀಯ ಸ್ಥಾನಮಾನಗಳು ಸರಿಯಾಗಿ ದೊರಕುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.












