ಸನ್ಮಾರ್ಗ ವಾರ್ತೆ
ಬೆಂಗಳೂರು: ಪಟಾಕಿ ಅನ್ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದೆ.
ಈ ಅವಘಡವು ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.
ಬೆಂಕಿಯು ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ ಪರಿಣಾಮ, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿ ವರ್ಷದಂತೆ ದೀಪಾವಳಿಗಾಗಿ ವಿಶೇಷ ಪಟಾಕಿ ಲೋಡ್ ಲಾರಿಯಿಂದ ಇಳಿಸುವ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳೀಯರೂ ಕೂಡ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.
ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿ ಆಗುವುದರೊಂದಿಗೆ 1 ಕ್ಯಾಂಟರ್, 2 ಬೊಲೆರೋ, 4 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ದೊಡ್ಡ ಮಳಿಗೆ ಆಗಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೂ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ‘ಬಾಲಾಜಿ ಕ್ರಾಕರ್ಸ್ ದಾಸ್ತಾನು ಮಳಿಗೆಗೆ ಕ್ಯಾಂಟರ್ ವಾಹನದಿಂದ ಪಟಾಕಿ ಇಳಿಸುವಾಗ ಅವಘಡ ಸಂಭವಿಸಿದೆ. ಕೂಡಲೇ ಮಳಿಗೆ ಮತ್ತು ಗೋದಾಮಿಗೆ ಬೆಂಕಿಯ ಜ್ವಾಲೆ ಆವರಿಸಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ” ಎಂದು ತಿಳಿಸಿದರು.












