ಸನ್ಮಾರ್ಗ ವಾರ್ತೆ
ಬೆಂಗಳೂರು: ‘ನಮ್ಮ ಮೆಟ್ರೋ’ ಸೇವೆಯನ್ನು ಬಳಸುವಾಗ ಕೆಲವು ಪ್ರಯಾಣಿಕರು ಸರಿಯಾಗಿ ಮಾಸ್ಕ್ ಗಳನ್ನು ಧರಿಸುವುದಿಲ್ಲ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ ಸಿಎಲ್) ಕೋವಿಡ್ ನಿಯಮ ಉಲ್ಲಂಘಿಸಿದರೆ 250 ರೂ.ದಂಡ ವಿಧಿಸುವುದಾಗಿ ತಿಳಿಸಿದೆ.
ಈ ನಿಯಮವನ್ನು ಜಾರಿಯಲ್ಲಿರುವಂತೆ ನೋಡಿಕೊಳ್ಳಲು ನಮ್ಮ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿರುವ ಮೆಟ್ರೋ ಕಾರ್ಯನಿರ್ವಾಹಕ ನಿರ್ದೇಶಕ ಶಂಕರ್ ಎ.ಎಸ್. (ಕಾರ್ಯಾಚರಣೆ ಮತ್ತು ನಿರ್ವಹಣೆ), ಕೋವಿಡ್ ಪ್ರಕರಣಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಲ್ಬಣಗೊಳ್ಳುತ್ತಿರುವುದರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ.
2020 ರ ಮಾರ್ಚ್ ನಲ್ಲಿ ರಾಷ್ಟ್ರವ್ಯಾಪಿ ಲಾಕ್ಡೌನ್ ಹೇರಿದ ನಂತರ ಬೆಂಗಳೂರಿನಲ್ಲಿ ಮೆಟ್ರೋ ಸೇವೆಗಳು 2020 ರ ಸೆಪ್ಟೆಂಬರ್ 7 ರಂದು ಮತ್ತೆ ಪ್ರಾರಂಭಿಸಲಾಗಿತ್ತು. ಅಂದಿನಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಸಿಬ್ಬಂದಿಗಳು ಸಾರ್ವಜನಿಕರಿಗೆ ಸಲಹೆಗಳನ್ನು ನೀಡುತ್ತಿದ್ದಾರೆ. ಅಲ್ಲದೇ, ಥರ್ಮಲ್ ಸ್ಕ್ರೀನಿಂಗ್ ನಂತರವೇ ಪ್ರಯಾಣಿಕರಿಗೆ ಪ್ಲಾಟ್ಫಾರ್ಮ್ಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ದೇಶದ ಇತರ ಮಹಾನಗರಗಳಂತೆ ಟೋಕನ್ ಗಳ ಮಾರಾಟವನ್ನು ನಿಲ್ಲಿಸಿ, ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತಿದೆ.












