ಸನ್ಮಾರ್ಗ ವಾರ್ತೆ
ಬೆಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಹಜ್ ಸಮಿತಿಯ ಮಾಜಿ ಅಧ್ಯಕ್ಷ ರೌಫುದ್ದೀನ್ ಕಚ್ಚರಿವಾಲಾ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕರು ಮತ್ತು ಇತರರೊಂದಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದರ ಬೆನ್ನಲ್ಲೇ, ಬಿಜೆಪಿ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ನೋಟಿಸ್ಗೆ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದ ಕಾರಣ ಶಿಸ್ತು ಕ್ರಮವಾಗಿ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಕುರಿತು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರಕಟಣೆ ಹೊರಡಿಸಿ, ಉಚ್ಚಾಟನೆಯ ನಿರ್ಧಾರ ತಕ್ಷಣದಿಂದ ಜಾರಿಗೆ ಬರುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಕಚ್ಚರಿವಾಲಾ ಅವರನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಕೂಡಾ ಮುಕ್ತ ಗೊಳಿಸಲಾಗಿದೆ ಎಂದು ಹೇಳಿದರು.












