ಸನ್ಮಾರ್ಗ ವಾರ್ತೆ
ಬೆಂಗಳೂರು: ರಾಜಕೀಯವಾಗಿ ಭಾರೀ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 4ರ ಫಲಿತಾಂಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದ ಮೂವರು ಪ್ರಮುಖ ಮುಸ್ಲಿಮ್ ನಾಯಕರು ಷಡ್ಯಂತ್ರ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಲಾಗಿದೆ.
ಸಚಿವ ಝಮೀರ್ ಅಹ್ಮದ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತಮಗೆ ಬೇಕಾದಂತೆ ಮುಸ್ಲಿಮ್ ಸಮುದಾಯದವರಿಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಇವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಮೂಲಗಳು, ಈ ನಾಯಕರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಒತ್ತಾಯಿಸಿವೆ.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ, ಅವರ ಮೊಮ್ಮಗ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಬೇಕೆಂದು ಕುಟುಂಬದವರು ಪಟ್ಟು ಹಿಡಿದಿದ್ದರು. ಆದರೆ ಸಚಿವ ಝಮೀರ್ ಅಹ್ಮದ್ ಅವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ವಾದಿಸಿದ್ದರು. ಅಂತಿಮವಾಗಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸಭೆಗಳ ನಂತರ ಸಮರ್ಥ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಈ ಬೆಳವಣಿಗೆಯಿಂದಾಗಿ ಝಮೀರ್ ಅವರು ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎಂಬ ಅನುಮಾನವಿತ್ತಾದರೂ, ಕೊನೆಯ ಕ್ಷಣದಲ್ಲಿ ಅವರು ದಾವಣಗೆರೆಗೆ ಆಗಮಿಸಿದ್ದರು. ಆದರೆ ಅವರ ಭೇಟಿಯು ಕೇವಲ ಸುದ್ದಿಗೋಷ್ಠಿಗಷ್ಟೇ ಸೀಮಿತವಾಗಿತ್ತು ಎಂಬ ಅಂಶ ವರದಿಯಾಗಿದೆ.












