ಸನ್ಮಾರ್ಗ ವಾರ್ತೆ
ಕರಾವಳಿ ಮತ್ತು ಮಲೆನಾಡು ಕರ್ನಾಟಕದ ಜನಸಾಮಾನ್ಯರಿಗೆ ನ್ಯಾಯ ಸುಲಭವಾಗಿ, ಶೀಘ್ರವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾವನೆಯ ಅಗತ್ಯದ ಕುರಿತು ಜನಜಾಗೃತಿ ಮೂಡಿಸಲು ಹಾಗೂ ಈ ಬೇಡಿಕೆಗೆ ವ್ಯಾಪಕ ಬೆಂಬಲ ಕ್ರೋಡೀಕರಿಸಲು ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಮಿನ್ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವತಿಯಿಂದ ಅಕ್ಟೋಬರ್ 16 ರಂದು ಶುಕ್ರವಾರ ಸಂಜೆ 4 ಗಂಟೆಗೆ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹಿಂ ಹೇಳಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಂಗಳೂರಿನ ಸ್ಟೇಟ್ ಬ್ಯಾಂಕ್ ನಲ್ಲಿರುವ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದ ಭಾರತೀಯ ರೆಡ್ ಕ್ರಾಸ್ ಕಟ್ಟಡದಲ್ಲಿ ಈ ಸಭೆ ನಡೆಯಲಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಜನರು ನ್ಯಾಯಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸಬೇಕಾದ ಸಂದರ್ಭದಲ್ಲಿ ದೂರದ ಪ್ರಯಾಣ, ಸಮಯದ ವ್ಯಯ ಆಗುತ್ತದೆ. ವಸತಿ ವೆಚ್ಚ ಹಾಗೂ ಇತರ ಆರ್ಥಿಕ ಹೊರೆಗಳನ್ನು ಎದುರಿಸಬೇಕಾಗುತ್ತದೆ. ವಿಶೇಷವಾಗಿ ಬಡವರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ದೂರದ ಪ್ರದೇಶಗಳಿಂದ ಬರುವ ಕಕ್ಷಿದಾರರಿಗೆ ಈ ಪರಿಸ್ಥಿತಿ ಹೆಚ್ಚಿನ ತೊಂದರೆಯನ್ನುಂಟುಮಾಡುತ್ತದೆ ಎಂದರು.
ಈ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದರಿಂದ ಕರಾವಳಿ ಮತ್ತು ಮಲೆನಾಡಿನ ಜನರಿಗೆ ನ್ಯಾಯದ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಪ್ರಯಾಣದ ಸಮಯವನ್ನು ಉಳಿಸಲು ಹಾಗೂ ನ್ಯಾಯಕ್ಕಾಗಿ ತಗಲುವ ಹೆಚ್ಚುವರಿ ವೆಚ್ಚವನ್ನು ಕಡಿಮೆ ಮಾಡಲು ನೆರವಾಗಬಹುದು ಎಂಬ ಆಶಯದೊಂದಿಗೆ ಈ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದರು.












