ಸನ್ಮಾರ್ಗ ವಾರ್ತೆ
ಶಿಮ್ಲಾ: ಮಾಜಿ ಕಾಂಗ್ರೆಸ್ ನಾಯಕ ವಿಜಯ್ ಸಿಂಗ್ ಮಂಕೋಟಿಯಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವಾಗಲೇ ವಿಜಯ್ ಸಿಂಗ್ ಬಿಜೆಪಿ ಸೇರ್ಪಡೆಯಾಗಿದ್ದು, ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರವರು ಸಿಂಗ್ರವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಿದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ನಿರ್ಧರಿಸಿರುವ ಮಂಕೋಟಿಯಾ ಅವರಿಗೆ ಪಕ್ಷಕ್ಕೆ ಸ್ವಾಗತ ಎಂದು ನಡ್ಡಾ ಹೇಳಿದರು.
ಮಂಕೋಟಿಯಾ ಅವರು ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ರವರ ಕಟು ಟೀಕಾಕಾರರಾಗಿದ್ದರು. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ಕೂಡ ನಡೆಯಲಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ 62 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಈ ಹಿಂದೆ ಬಿಡುಗಡೆ ಮಾಡಿತ್ತು. ಹಿಮಾಚಲ ಪ್ರದೇಶ 68 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 44 ಮತ್ತು ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿತ್ತು.












