ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ಭಾರಿ ಮಳೆ ಎಚ್ಚರಿಕೆ ಹಿನ್ನೆಲೆಯಲ್ಲಿ ಜುಲೈ 23ರಂದು ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

0
267

ಸನ್ಮಾರ್ಗ ವಾರ್ತೆ

ಭಟ್ಕಳ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 22ರಿಂದ 23ರವರೆಗೆ ಭಾರಿ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ನೀಡಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದೆ.

ಜಿಲ್ಲಾ ಅಪರ ಜಿಲ್ಲಾಧಿಕಾರಿ ಪ್ರಕಟಿಸಿರುವ ಆದೇಶದನ್ವಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳೊಂದಿಗೆ ಅಂಗನವಾಡಿಗಳಿಗೆ ಜುಲೈ 23, ಮಂಗಳವಾರ ಒಂದು ದಿನ ರಜೆ ಘೋಷಿಸಲಾಗಿದೆ.

ಮಳೆ ಭೀತಿಯಿಂದ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರಮವನ್ನು ವಿಪತ್ತು ನಿರ್ವಹಣಾ ಕಾಯ್ದೆ, 2005ರ ಕಲಂ 34 (ಎಮ್)ರಡಿ ತೆಗೆದುಕೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಈ ಆದೇಶವನ್ನು ತಕ್ಷಣದಿಂದ ಜಾರಿಗೆ ತರಲು ಸೂಚನೆ ನೀಡಲಾಗಿದೆ. ಜೊತೆಗೆ, ಈ ರಜೆಯ ಸಮಯವನ್ನು ಮುಂದಿನ ಅವಧಿಯಲ್ಲಿ ಪೂರೈಸಿಕೊಳ್ಳುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ಎಚ್ಚರಿಕೆಯಿಂದ ತಕ್ಷಣದ ಕ್ರಮ ಕೈಗೊಂಡ ಜಿಲ್ಲಾಡಳಿತದ ನಿರ್ಧಾರಕ್ಕೆ ಪಾಲಕರು ಹಾಗೂ ಶಿಕ್ಷಕರು ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.