ಕಾಂಗ್ರೆಸ್ಸನ್ನು ಸೋಲಿಸಬೇಕು ಎಂಬರ್ಥದಲ್ಲಿ ಹೇಳಿದ್ದೇನೆ; ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಹೇಳಿಕೆಗೆ ಸಚಿವ ಅಶ್ವಥ್‌ ನಾರಾಯಣ್‌ ಸಮಜಾಯಿಷಿ

0
313

ಸನ್ಮಾರ್ಗ ವಾರ್ತೆ

ಬೆಂಗಳೂರು : ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಅಶ್ವಥ್‌ ನಾರಾಯಣ್‌, ತಮ್ಮ ಹೇಳಿಕೆಯನ್ನು ಸಮಜಾಯಿಷಿದ್ದು, “ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ಆ ಮಾತು ಆಡಿದ್ದೇನೆ” ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ನೀಡಿದ್ದ ಹೇಳಿಕೆ ಬಗ್ಗೆ ವಿಧಾನಸೌಧದ ಮುಂದೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಡಿದು ಬನ್ನಿ” ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ನಮಗೆ ಮತಯಂತ್ರವೇ ಕೋವಿ, ಮತದಾರರು ಕಾಂಗ್ರೆಸ್ ವಿರುದ್ದ ಒತ್ತುವ ಒಂದೊಂದು ಮತಗಳೂ ಒಂದೊಂದು ಬುಲೆಟ್‌ಗಳೇ. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಂತಿಮ ಮೊಳೆ ಹೊಡೆಯಲು ಜನತೆಯೇ ತೀರ್ಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

ಇತಿಹಾಸ ತಿರುಚಿ, ಮತಾಂಧ ಟಿಪ್ಪುವಂಥವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಬಿಂಬಿಸಿದ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರಿಗೆ ನನ್ನ ಮಾತನ್ನು ತಿರುಚಿ ಬಿತ್ತರಿಸುವುದು ಐದು ನಿಮಿಷದ ಕೆಲಸ. ಮುಂಬರುವ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರ ಸಿಗದೇ, ಮಾನಸಿಕವಾಗಿ ಕುಗ್ಗಿರುವ ಸಿದ್ದರಾಮಯ್ಯ ಅವರಿಗೆ ಕ್ಷುಲ್ಲಕ ವಿಷಯಗಳೇ ಆಸರೆಯಾಗಿದೆ ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್‌ ಸಮಜಾಯಿಷಿ ನೀಡಿದ್ದಾರೆ.

ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ ಎಂದು ಸಚಿವ ಅಶ್ವಥ್‌ ನಾರಾಯಣ್‌ ಸರಣಿ ಟ್ವೀಟ್ ಮೂಲಕ ಕೂಡ ಹೇಳಿಕೆ ನೀಡಿದ್ದಾರೆ.