ಸನ್ಮಾರ್ಗ ವಾರ್ತೆ-
ನವದೆಹಲಿ: ಹೈದರಾಬಾದ್ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಮತ್ತು ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳನ್ನು ತೀವ್ರವಾಗಿ ಖಂಡಿಸಿರುವ ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಮಹಿಳಾ ವಿಭಾಗದ ಕಾರ್ಯದರ್ಶಿ ಅತಿಯಾ ಸಿದ್ದಿಕಾ ಮತ್ತು ಸಹ ಕಾರ್ಯದರ್ಶಿ ರಹಮತುನ್ನಿಸಾ ಅವರು, ಆರೋಪಿಗಳನ್ನು ಶೀಘ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಅವರು ಇಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತಾಡುತ್ತಿದ್ದರು.
ಯುವ ವೈದ್ಯೆಯ ಮೇಲೆ ನಡೆದ ಕ್ರೂರ ಅತ್ಯಾಚಾರ ಮತ್ತು ಹತ್ಯೆಯನ್ನು ನಾವು ಖಂಡಿಸುತ್ತೇವೆ ಮತ್ತು ದುಷ್ಕರ್ಮಿಗಳಿಗೆ ಶೀಘ್ರವೇ ಶಿಕ್ಷೆಯಾಗಬೇಕೆಂದು ಆಗ್ರಹಿಸುತ್ತೇವೆ. ಮಹಿಳೆಯರ ಮೇಲಿನ ಅತ್ಯಾಚಾರಗಳು ಮತ್ತು ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಮತ್ತು ಇತ್ತೀಚಿನ ಎನ್ಸಿಆರ್ಬಿ ದತ್ತಾಂಶದ ಪ್ರಕಾರ, ಭಾರತದಲ್ಲಿ ಪ್ರತಿ ಗಂಟೆಗೆ ಸುಮಾರು 4 ಮಹಿಳೆಯರು ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ ಮತ್ತು ಪ್ರತಿ 3 ನಿಮಿಷಕ್ಕೆ 2 ಮಹಿಳೆಯರು ಲೈಂಗಿಕ ಕಿರುಕುಳಕ್ಕೊಳಗಾಗುತ್ತಿದ್ದಾರೆ. ಆದ್ದರಿಂದ ಅತ್ಯಾಚಾರ ಮತ್ತು ಲೈಂಗಿಕ ಹಿಂಸೆ ನಡೆಸುವವರನ್ನು ತ್ವರಿತವಾಗಿ ವಿಚಾರಣೆ ನಡೆಸಿ ಕಾನೂನಿನಡಿಯಲ್ಲಿ ಗರಿಷ್ಠ ಶಿಕ್ಷೆ ನೀಡಬೇಕು. ಅತ್ಯಾಚಾರ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತೀರಾ ಕಡಿಮೆಯಾಗಿರುವುದು ಅದರ ನಿಯಂತ್ರಣಕ್ಕೆ ದೊಡ್ಡ ಅಡ್ಡಿಯಾಗಿದೆ. ಮಹಿಳೆಯರಿಗೆ ಸುರಕ್ಷತೆ ಒದಗಿಸುವ ಮತ್ತು “ಬೇಟಿ ಬಚಾವೊ” ಎಂಬ ಘೋಷಣೆಗೆ ತಕ್ಕಂತೆ ವರ್ತಿಸುವ ಎಚ್ಚರವನ್ನು ಸರಕಾರ ಕೈಗೂಳ್ಳುತ್ತದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ.












